Advertisement

ಬಾದಾಮಿಯಲ್ಲಿ ಸ್ಪರ್ಧೆ: ಸಿಎಂಗೆ ಗ್ರೀನ್‌ ಸಿಗ್ನಲ್‌

07:00 AM Apr 11, 2018 | |

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿಯೂ ಸ್ಪರ್ಧಿಸಲು ಕಾಂಗ್ರೆಸ್‌ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದ್ದು ಅಂತಿಮ ತೀರ್ಮಾನ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಟ್ಟಿದೆ ಎಂದು ತಿಳಿದು ಬಂದಿದೆ.

Advertisement

ದೆಹಲಿಯಲ್ಲಿ ಮಂಗಳವಾರ ನಡೆದ ಸ್ಕ್ರೀನಿಂಗ್‌ ಕಮಿಟಿಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಮ್ಮತಿ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಕುರುಬ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಆ ಕ್ಷೇತ್ರದಿಂದ ಸ್ಪರ್ಧಿಸಿದರೆ ಸುಲಭವಾಗಿ ಗೆಲುವು  ಸಾಧಿಸಬಹುದು. ಜತೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಸ್ಪರ್ಧೆ ಮಾಡುವುದರಿಂದ ಆ ಭಾಗದ ಉಳಿದ ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಅನುಕೂಲವಾಗಲಿದೆ ಎಂದು ಲೆಕ್ಕಾಚಾರ ಹೈಕಮಾಂಡ್‌ನ‌ದ್ದು ಎಂದು ಹೇಳಲಾಗಿದೆ. ಆದರೆ, ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಓಡಾಡಲು ಕಷ್ಟ. ಜತೆಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುತ್ತಾರೆಂಬ ಭೀತಿಯಿಂದ ರಕ್ಷಣೆಗೆ ಮತ್ತೂಂದು
ಕ್ಷೇತ್ರ ಆಯ್ದುಕೊಂಡಿದ್ದಾರೆಂಬ ಆರೋಪ ಬರಬಹುದು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಬಾದಾಮಿಯಲ್ಲಿ ಸ್ಪರ್ಧಿಸುವ ಕುರಿತು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಬಾದಾಮಿ ಹಾಗೂ ಬಾಗಲಕೋಟೆ ಜಿಲ್ಲಾ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನಿಸಲಿದ್ದಾರೆ ಎಂದು ಹೇಳಲಾಗಿದೆ. ಬಿ.ಬಿ. ಚಿಮ್ಮನಕಟ್ಟಿ ಅವರಿಗೆ ಆರೋಗ್ಯದ ಸಮಸ್ಯೆ ಇದೆ ಎಂದು ಬೇರೆಯವರಿಗೆ ಟಿಕೆಟ್‌ ನೀಡುವಂತೆ ಸ್ಥಳೀಯರು ಒತ್ತಾಯ ಮಾಡಿದ್ದಾರೆ.

ದೆಹಲಿಯಲ್ಲೇ ಸಭೆ
ಈ ಮಧ್ಯೆ, ಬಾದಾಮಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸ್ಥರ್ಧೆಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡುತ್ತಿದ್ದಂತೆ ಸಾರಿಗೆ ಸಚಿವ ಎಚ್‌.
ಎಂ. ರೇವಣ್ಣ ಅವರು ಬಾದಾಮಿ ಕ್ಷೇತ್ರದ ಸ್ಥಳೀಯ ಮುಖಂಡರು ಹಾಗೂ ಟಿಕೆಟ್‌ ಆಕಾಂಕ್ಷಿಗಳೊಂದಿಗೆ ದೆಹಲಿ ಯಲ್ಲಿಯೇ ಸಭೆ
ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ, ಎಲ್ಲರೂ ಒಟ್ಟಾಗಿ ಕೆಲಸ ಮಾಡುವಂತೆ ಟಿಕೆಟ್‌ ಆಕಾಂಕ್ಷಿಗಳಿಗೆ
ಸೂಚಿಸಿದ್ದಾರೆಂದು ತಿಳಿದು ಬಂದಿದೆ.

ಹೈಕಮಾಂಡ್‌ ಚರ್ಚೆ
ದೆಹಲಿಯಲ್ಲಿ ಮಂಗಳವಾರವೂ ನಡೆದ ಸ್ಕ್ರೀನಿಂಗ್‌ ಕಮಿಟಿ ಸಭೆಯಲ್ಲಿ, 224 ಕ್ಷೇತ್ರ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮಾಲೋಚನೆ ನಡೆಯಿತು. ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ರಾಮಕೃಷ್ಣ, ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಹಾಗೂ ಬಾಗಲಕೋಟೆ ಶಾಸಕ ಎಚ್‌.ವೈ ಮೇಟಿ, ಹೂವಿನಹಡಗಲಿ ಟಿ.ಪಿ. ಪರಮೇಶ್ವರ್‌ ನಾಯ್ಕ, ಶಾಂತಿನಗರ ಕ್ಷೇತ್ರದ ಶಾಸಕ ಎನ್‌.ಎ. ಹ್ಯಾರೀಸ್‌ಗೆ ಟಿಕೆಟ್‌ ನೀಡುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದು ಹೇಳಲಾಗುತ್ತಿದೆ.

ಪಿ.ಟಿ.ಪರಮೇಶ್ವರ್‌ ನಾಯ್ಕಗೆ ಟಿಕೆಟ್‌ ನೀಡಬಾರದು. ಅವರ ಬದಲಿಗೆ ಯುವ ಕಾಂಗ್ರೆಸ್‌ ಘಟಕದ ಕೃಷ್ಣಾ ನಾಯ್ಕಗೆ ಟಿಕೆಟ್‌ ನೀಡಬೇಕು ಎಂದು ಹರಪನಹಳ್ಳಿ ಶಾಸಕ ಎಂ.ಪಿ. ರವೀಂದ್ರ ಸೇರಿದಂತೆ ಸ್ಥಳೀಯ ಮುಖಂಡರು ಸಿದ್ದರಾಮಯ್ಯ ಹಾಗೂ ಪರಮೇಶ್ವರ್‌ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಸಂತೋಷ್‌ ಲಾಡ್‌ ನೇತೃತ್ವದಲ್ಲಿ
ದೆಹಲಿಯಲ್ಲಿ ಸ್ಥಳೀಯ ನಾಯಕರು ಒಂದೆಡೆ ಸೇರಿ ಚರ್ಚಿಸಿರುವ ಬಗ್ಗೆ ಮಾಹಿತಿ ಲಭಿಸಿದೆ. 

Advertisement

ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆಂದು ಸಿದ್ದರಾಮಯ್ಯ ಎಲ್ಲೂ ಹೇಳಿಲ್ಲ. ಇದು ಮಾಧ್ಯಮಗಳ ಸೃಷ್ಟಿ. ಈ ಕುರಿತು ಹೈಕಮಾಂಡ್‌ ಅಥವಾ ಸಿಎಂ ನನ್ನ ಜತೆಗೆ ಚರ್ಚಿಸಿಲ್ಲ.
● ಬಿ.ಬಿ. ಚಿಮ್ಮನಕಟ್ಟಿ, ಬಾದಾಮಿ ಶಾಸಕ

Advertisement

Udayavani is now on Telegram. Click here to join our channel and stay updated with the latest news.

Next