ಬೆಂಗಳೂರು: ಭ್ರಷ್ಟಾಚಾರ ಆರೋಪದಡಿ ಸರ್ಕಾರಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ 150ಕ್ಕೂ ಹೆಚ್ಚು ಪ್ರಕರಣಗಳ ಪೈಕಿ 90ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಲೋಕಾಯುಕ್ತ ಪೊಲೀಸರು “ಬಿ’ ರಿಪೋರ್ಟ್ ಸಲ್ಲಿಸಿ ನ್ಯಾಯಾಲಯಗಳಲ್ಲಿ ಪ್ರಕರಣಗಳು ಖುಲಾಸೆಯಾಗಲು ಕಾರಣರಾಗುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಗುರುವಾರ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಭ್ರಷ್ಟಾಚಾರ ತಡೆಗಟ್ಟಲು ಲೋಕಾಯುಕ್ತ ಸಂಸ್ಥೆ ಸ್ಥಾಪಿಸಲಾಗಿದೆ. ಭ್ರಷ್ಟಾಚಾರ ಎಸಗಿದ ಸರ್ಕಾರಿ ನೌಕರರು, ಚುನಾಯಿತ ಜನಪ್ರತಿನಿಧಿಗಳ ಮೇಲೆ ದಾಳಿ ನಡೆಸಿ ಶಿಕ್ಷಿಸುತ್ತಿದ್ದ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಹಿಂಪಡೆಯದ ಸರ್ಕಾರ ಎಸಿಬಿ ಸ್ಥಾಪಿಸಿತ್ತು. ಲೋಕಾಯುಕ್ತ ಸಂಸ್ಥೆಯನ್ನು ಕೇವಲ ಅರ್ಜಿ ವಿಚಾರಣೆ ಸಂಬಂಧಿಸಿದ ಕೆಲಸಗಳನ್ನು ನಿರ್ವಹಿಸಲು ಸೂಚಿಸಿತ್ತು.
ಜತೆಗೆ ಇಲ್ಲಿವರೆಗೂ ದಾಖಲಾಗಿದ್ದ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತ ಪೊಲೀಸರೇ ತನಿಖೆ ನಡೆಸಬೇಕೆಂದು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ 150ಕ್ಕೂ ಹೆಚ್ಚು ದಾಳಿ ಪ್ರಕರಣಗಳ ಪೈಕಿ 90ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಿ ವರದಿ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.
ಈ ರೀತಿಯ ಅಂತಿಮ ವರದಿ ಸಲ್ಲಿಸುವ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಪರೋಕ್ಷವಾಗಿ ನೆರವಾಗಿದ್ದಾರೆ. ಈ ವಿಚಾರಗಳ ಬಗ್ಗೆ ತಿಳಿದಿರುವ ಲೋಕಾಯುಕ್ತರು ಕೂಡ ಭ್ರಷ್ಟಚಾರದಲ್ಲಿ ತೊಡಗಿರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಸಂಸ್ಥೆಯ ಎಲ್ಲ ಹಂತದ ಆರೋಪಿತ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆಗೆ ಆದೇಶ ನೀಡಬೇಕು ಎಂದು ದಿನೇಶ್ ಕಲ್ಲಹಳ್ಳಿ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಹಿರಿಯ ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಸೇರಿ ಕೆಲ ಹಿರಿಯ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣಗಳಲ್ಲೂ ಬಿ ವರದಿ ಸಲ್ಲಿಸಲು ಲೋಕಾಯುಕ್ತ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗಾಗಿ ಹೈಕೋರ್ಟ್‌ನ ನ್ಯಾಯಾಧೀಶರ ಮೂಲಕ ನ್ಯಾಯಾಂಗ ತನಿಖೆ ನಡೆಸಿ ವರದಿ ಪಡೆದುಕೊಳ್ಳಬೇಕೆಂದು ದೂರಿನಲ್ಲಿ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.