ಅರಸೀಕೆರೆ: ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಗದಿತ ಅವಧಿಯಲ್ಲಿ ಮಾಡದೇ ಅನಗತ್ಯವಾಗಿ ವಿಳಂಬ ಮಾಡುವುದು, ನಿರ್ಲಕ್ಷ್ಯ ತೋರುವ ಅಥವಾ ಲಂಚ ಕೇಳಿವ ಸರ್ಕಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಜಿಲ್ಲಾ ಭಷ್ಟಾಚಾರ ನಿಗ್ರಹದಳಕ್ಕೆ ಲಿಖೀತ ದೂರು ಸಲ್ಲಿಸುವಂತೆ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಇನ್ಸ್ ಪೆಕ್ಟರ್ ಭರತ್ ಗೌಡ ತಿಳಿಸಿದರು.
ನಗರದ ತಾಲೂಕು ಕಚೇರಿಗೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದ ಸದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಇನ್ಸ್ ಪೆಕ್ಟರ್ ಭರತ್ ಗೌಡ, ಸರ್ಕಾರ ಅನೇಕ ಜನಪರ ಯೋಜನೆಗಳನ್ನು ರೂಪಿಸಿ ಜಾರಿಗೆ ತರುವ ಮೂಲಕ ದೇಶದ ಪ್ರಜೆಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಲು ಪ್ರೋತ್ಸಾಹ ನೀಡುತ್ತಿದ್ದು, ಇದಕ್ಕೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದರು.
ಅಕ್ರಮ ಆಸ್ತಿ ಸಂಪಾದನೆ ತನಿಖೆ: ಸಾರ್ವಜನಿಕರಿಂದ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಕರ್ತವ್ಯಲೋಪ ಸೇರಿದಂತೆ ಆಕ್ರಮ ಹಣ ಮತ್ತು ಆಸ್ತಿ ಸಂಪಾದನೆ ಹಾಗೂ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಅಧಿಕಾರಿಗಳಿಂದ ಭ್ರಷ್ಟಾಚಾರ ವೆಸಗಿದ್ದರೆ ಅಂತಹ ಅಧಿಕಾರಿಗಳ ಕರ್ತವ್ಯ ಲೋಪವನ್ನು ಪ್ರಶ್ನಿಸಿ ಸಾರ್ವಜನಿಕರು ತಮ್ಮ ಕಚೇರಿಗೆ ಲಿಖೀತವಾಗಿ ದೂರು ನೀಡಿದ್ದಲ್ಲಿ ಅದನ್ನು ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಲು ಸಂಬಂಧಪಟ್ಟ ಇಲಾಖೆಯ ಮೇಲಾಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು, ಅಲ್ಲದೆ ಲಿಖೀತ ದೂರುಗಳನ್ನು ನೀಡುವ ವ್ಯಕ್ತಿಗಳ ಬಗೆಯ ಮಾಹಿತಿಯನ್ನು ಗೌಪ್ಯವಾಗಿ ಕಾಪಾಡಿಕೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಚಂದ್ರಶೇಖರ್ ಎಂಬುವರು ನಗರದ ಸರ್ಕಾರಿ ಜೆ.ಸಿ.ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕಾಪೌಂಡ್ ನಿರ್ಮಾಣದ ಕಾರ್ಯದ ಬಗ್ಗೆ ಲಿಖೀತ ದೂರು ನೀಡಿದ್ದನ್ನು ಪಡೆದುಕೊಂಡು ಪರಿಶೀಲಿಸಿ ಸೂಕ್ತಕ್ರಮಕೈಗೊಳ್ಳುವ ಭರವಸೆಯನ್ನು ನೀಡಿದರು. ಗ್ರೇಡ್ 2 ತಹಶೀಲ್ದಾರ್ ಪಾಲಾಕ್ಷ ಹಾಗೂ ಶಿರಸ್ತೇದಾರ್ ಶಿವಶಂಕರ್ ಮತ್ತು ಪುಟ್ಟಯ್ಯ ಹಾಗೂ ಇನ್ನಿತರರು ಹಾಜರಿದ್ದರು.
ಅಧಿಕಾರಿಗಳ ನಿರ್ಲಕ್ಷ್ಯ- ಆರೋಪ: ಕೆಲವು ಇಲಾಖೆಗಳಲ್ಲಿ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸದ ಕಾರಣ ಸಾರ್ವಜನಿಕರ ಕೆಲಸ ಕಾರ್ಯಗಳು ನನೆಗುದಿಗೆ ಬಿದ್ದಿದೆ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಇನ್ಸ್ ಪೆಕ್ಟರ್ ಭರತ್ ಗೌಡ ಹೇಳಿದರು. ಸರ್ಕಾರಿ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ನಿಗದಿತ ಅವಧಿಯಲ್ಲಿ ಅವರ ಕೆಲಸ ಕಾರ್ಯಗಳನ್ನು ಮಾಡದೇ ಅನಗತ್ಯವಾಗಿ ಕಚೇರಿಗೆ ಅಲೆದಾಡಿಸುವ ಮೂಲಕ ವಿಳಂಬ ಧೋರಣೆಯನ್ನು ಅನುಸರಿಸುತ್ತಾ ನಿರ್ಲಕ್ಷ್ಯ ತೋರುವುದು ಮತ್ತು ಲಂಚದ ಹಣಕ್ಕಾಗಿ ಪೀಡಿಸುತ್ತಿದ್ದಾರೆ ಎಂಬ ಸಾರ್ವಜನಿಕರ ಆರೋಪಗಳ ಹಿನ್ನೆಲೆಯಲ್ಲಿ ತಾವು ಇಂದು ತಾಲೂಕು ಕಚೇರಿಗೆ ಭೇಟಿ ನೀಡಿರುವುದಾಗಿ ತಿಳಿಸಿದರು.
ಪ್ರತಿ ತಿಂಗಳು ನಿಗದಿತ ದಿನದಂದು ಅರಸೀಕೆರೆ ನಗರಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುತ್ತೇನೆ. ಸ್ವೀಕರಿಸಿದ ದೂರುಗಳನ್ನು ಪರಿಶೀಲಿಸಿ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತೇನೆ
-ಭರತ್ ಗೌಡ, ಭ್ರಷ್ಟಾಚಾರ ನಿಗ್ರಹ ದಳ ಪಿಎಸ್‌ಐ