ಬೆಂಗಳೂರು: ಕಲಬುರಗಿಯಲ್ಲಿ 39 ಕೋಟಿ ರೂ. ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ಮಾಡುವುದಾಗಿ ಚುನಾವಣ ಪ್ರಚಾರ ಸಭೆಯಲ್ಲಿ ಘೋಷಿಸುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗವು ಗುರುವಾರ ನೃಪತುಂಗ ರಸ್ತೆಯಲ್ಲಿರುವ ಚುನಾವಣ ಆಯೋಗ ಕಚೇರಿಗೆ ಭೇಟಿ ನೀಡಿ ದೂರು ನೀಡಿದೆ.
ಮತದಾರರಿಗೆ ಬೆದರಿಕೆ ಹಾಕಿ ಕಾಂಗ್ರೆಸ್ ಅಭ್ಯರ್ಥಿಗೆ ಮತದಾನ ಮಾಡುವಂತೆ ಹೇಳುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಇನ್ನೊಂದು ದೂರನ್ನು ನೀಡಲಾಗಿದೆ.
ಕುಣಿಗಲ್ ತಾಲೂಕಿನ ಚಿಕ್ಕಅಜೇìನಹಳ್ಳಿ ಗ್ರಾಮದ ಪ್ರೇಮ್ ಕುಮಾರ್ ಅವರ ತೋಟಕ್ಕೆ ರಾಜಕೀಯ ವೈಷಮ್ಯ ಕಾರಣಕ್ಕೆ ಬೆಂಕಿ ಹಚ್ಚಲಾಗಿದೆ. ಘಟನೆಗೆ ಕಾರಣಕರ್ತರಾದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಠಿನ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸುಳ್ಳು ಹೇಳಿಕೆಗೆ ಸಹಿ ಹಾಕಿಸಿಕೊಂಡ ಪೊಲೀಸರನ್ನು ಅಮಾನತುಪಡಿಸುವಂತೆ ದೂರು ನೀಡಲಾಗಿದೆ.
ಕುಣಿಗಲ್ ವಿಧಾನಸಭಾ ಕ್ಷೇತ್ರದ ಎಲ್ಲ ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಪರಿಗಣಿಸಬೇಕು. ಬೆಂಗಳೂರು ಗ್ರಾಮಾಂತರ ಮತ ಕ್ಷೇತ್ರಕ್ಕೆ ಅರೆ ಸೇನಾಪಡೆ ನಿಯೋಜಿಸಬೇಕು ಎಂದು ಆಗ್ರಹಿಸಲಾಯಿತು.
ನಿಯೋಗದಲ್ಲಿ ಮಾಜಿ ಡಿಸಿಎಂ ಡಾ| ಸಿ.ಎನ್. ಅಶ್ವತ್ಥನಾರಾಯಣ, ರಾಜ್ಯ ವಕ್ತಾರ ಮೋಹನ್ ವಿಶ್ವ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಇದ್ದರು.