Advertisement

ತಿಂಗಳಾಂತ್ಯದಲ್ಲಿ ಎಲ್ಲ ಕಾಮಗಾರಿ ಪೂರ್ಣಗೊಳಿಸಿ

11:22 AM Jan 12, 2018 | Team Udayavani |

ಬೀದರ: ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಲೇ ಕೈಗೆತ್ತಿಕೊಂಡಿರುವ ಎಲ್ಲಾ ಕಾಮಗಾರಿಗಳನ್ನು ತಿಂಗಳಾಂತ್ಯದಲ್ಲಿ ಪೂರ್ಣಗೊಳಿಸಿ, ಬಾಕಿ ಉಳಿದಿರುವ ಕೆಲಸಗಳನ್ನು ಶೀಘ್ರ ಆರಂಭಿಸಬೇಕೆಂದು ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ ಹೇಳಿದರು.

Advertisement

ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಪೂರ್ಣಗೊಂಡಿರುವ ಕಟ್ಟಡ ಕಾಮಗಾರಿಗಳನ್ನು ಜನಪ್ರತಿನಿಧಿಗಳಿಂದ ದಿನಾಂಕ ನಿಗದಿಪಡಿಸಿ ಕೂಡಲೇ ಉದ್ಘಾಟಿಸಬೇಕು. ಪ್ರಸಕ್ತ ಸಾಲಿನಲ್ಲಿ ಜಿಪಂಗೆ ಬಿಡುಗಡೆಯಾಗಿರುವ ಅನುದಾನ ಪೂರ್ಣ ಬಳಕೆಯಾಗಬೇಕು. ಯಾವುದೇ ಕಾರಣಕ್ಕೂ ಅನುದಾನ ಮರಳಿ ಹೋಗದಂತೆ ಎಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎನ್ನುವ ದೂರುಗಳು ಬಂದಿವೆ. ಸಂಬಂಧಿಸಿದ ಅಧಿಕಾರಿಗಳು ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ನೀರಿನ ಘಟಕಗಳನ್ನು ಪರಿಶೀಲಿಸಿ ಯಂತ್ರಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಜಿಪಂ ಸಭೆಗಳಲ್ಲಿ ಪದೇ-ಪದೇ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಸಭೆಗಳಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯ ಹಾಜರಿರುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಮಾತನಾಡಿದ ಅವರು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಶೇ.100ರಷ್ಟು ಫಲಿತಾಂಶ ಬರುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. 

ಜಿಪಂ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 30 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿವೆ. ಈ ಪೈಕಿ 3 ಶಾಲೆಗಳಲ್ಲಿ ಪೂರ್ಣ ಪ್ರಮಾಣದ ಪ್ರಾಂಶುಪಾಲರಿದ್ದು, ಉಳಿದೆಡೆ ಪ್ರಭಾರಿ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ. ಪ್ರಾಂಶುಪಾಲರ ಪ್ರಭಾರ ನೀಡುವಾಗ ಅನುಭವ ಸೇರಿದಂತೆ ಇತರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

Advertisement

ಪ್ರೌಢ ಶಾಲೆಗಳಲ್ಲಿ ಗುತ್ತಿಗೆ ಆಧಾರದ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರಿಗೆ ಶೀಘ್ರ ವೇತನ ಬಿಡುಗಡೆ ಮಾಡಬೇಕು. ಶಿಥಿಲಾವಸ್ಥೆಯಲ್ಲಿರುವ ಶಾಲೆ ಕೊಠಡಿಗಳನ್ನು ನೆಲಸಮಗೊಳಿಸಿ ವಿದ್ಯಾರ್ಥಿಗಳು ನೆಮ್ಮದಿಯಿಂದ ವ್ಯಾಸಂಗ ಮಾಡಲು ಮುತುವರ್ಜಿ ವಹಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಡಿಆರ್‌ಡಿಎ ಕೋಶದ ಯೋಜನಾ ನಿರ್ದೇಶಕ ರಾಮಕೃಷ್ಣ ಮಾತನಾಡಿ, ಸಕಾಲ ವ್ಯಾಪ್ತಿಗೆ ಒಳಪಡುವ ಎಲ್ಲಾ ಅರ್ಜಿಗಳನ್ನು ಸಕಾಲದಡಿ ನೋಂದಣಿ ಮಾಡಬೇಕು. ಈ ಸೇವೆಗಳನ್ನು ಯಾವುದೇ ಕಾರಣಕ್ಕೂ ಆಫ್‌ಲೈನ್‌ನಲ್ಲಿ ನಿರ್ವಹಿಸಕೂಡದು ಎಂದು ತಿಳಿಸಿದರು.

ಸಭೆಯಲ್ಲಿ ವಯಸ್ಕರ ಶಿಕ್ಷಣ, ಅಕ್ಷರ ದಾಸೋಹ, ಆಯುಷ್‌, ಸಮಾಜ ಕಲ್ಯಾಣ, ಬಿಸಿಎಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೃಷಿ, ತೋಟಗಾರಿಕೆ, ಪಶು ಪಾಲನೆ, ಅಲ್ಪಸಂಖ್ಯಾತರ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next