ಹಾಸನ: ನೆರೆ ಹಾಗೂ ಬರಪರಿಹಾರ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಎಲ್ಲಾÉ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಸೂಚಿಸಿದರು.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಆವರು, ನೆರೆಹಾವಳಿಯಿಂದ ಹಾನಿಗೊಳಗಾದ ಸಂತ್ರಸ್ತರ ಮನೆಗಳ ನಿರ್ಮಾಣ ಪ್ರಗತಿಯ ವಿವರ ತೆಗೆದುಕೊಳ್ಳಲು, ಈಗಾಗಲೇ ನಡೆಯುತ್ತಿರುವ ಮನೆ ಕಾಮಗಾರಿ ಫೋಟೋಗಳನ್ನು ತೆಗೆದು ಅಪ್‌ಲೋಡ್ ಮಾಡುವಂತೆ ತಿಳಿಸಿದರು.
ಫೆ.10ರೊಳಗೆ ಕಾಮಗಾರಿ ಆರಂಭಿಸಿ: ಲೋಕೋಪಯೋಗಿ, ಸಣ್ಣ ನೀರಾವರಿ, ಪಂಚಾಯತ್‌ರಾಜ್, ಕಂದಾಯ ಇಲಾಖೆಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಫೆ.10 ರೊಳಗೆ ಪ್ರಾರಂಭಿಸಬೇಕು. ಹಾಸನ ಜಿಲ್ಲೆಯಲ್ಲಿ ಬಾಕಿ ಇರುವ 195 ಕಾಮಗಾರಿಗಳು ತ್ವರಿತವಾಗಿ ಮುಕ್ತಾಯಗೊಳಿಸಬೇಕು ಎಂದು ಹೇಳಿದರು.
ಕಾಮಗಾರಿ ಪ್ರಗತಿ: ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ಜಿಲ್ಲೆಯಲ್ಲಿ 640 ಮನೆಗಳ ಕಾಮಗಾರಿ ವಿವಿಧ ಹಂತದಲ್ಲಿ ಪ್ರಗತಿಯಲ್ಲಿದ್ದು, ಜಿಲ್ಲೆಗೆ ನೀಡಿದ 27 ಕೋಟಿ ರೂ.ಗಳಲ್ಲಿ 1,938 ಕಾಮಗಾರಿಗಳನ್ನು ಆರಂಭಿಸಲಾಗಿದೆ. ಪ್ರವಾಹದಿಂದ ಜಿಲ್ಲೆಯಲ್ಲಿ 25,542 ರೈತರ ಬೆಳೆ ಹಾನಿಗೊಳಗಾಗಿದ್ದು, 40 ಕೋಟಿ ರೂ. ಹಣವನ್ನು ಪರಿಹಾರವಾಗಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ ಪರಮೇಶ್ ಮಾತನಾಡಿ, ಫೆ.13ಕ್ಕೆ ಕಾಮಗಾರಿಗಳ ಟೆಂಡರ್ ಆಗಲಿದ್ದು, ಮಾರ್ಚ್ ಒಳಗೆ ಕೆಲಸ ಪ್ರಾರಂಭಿಸಲಾಗುವುದು ಎಂದು ವಿವರ ಒದಗಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆನಂದ್‌ಕುಮಾರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಿ.ಎಸ್. ಮಂಜು ಮತ್ತಿತರರು ಹಾಜರಿದ್ದರು.