ಬೀದರ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡಿರುವ ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗಾಗಿ ಪೂರ್ಣ ಗೊಳಿಸುವಂತೆ ಜಿಲ್ಲಾಧಿಕಾರಿ ಡಾ|ಎಚ್. ಆರ್.ಮಹಾದೇವ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದಲ್ಲಿ ಸೋಮವಾರ ಜರುಗಿದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲ ಅನುಷ್ಠಾಧಿನಾ ಕಾರಿಗಳು ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಗುತ್ತಿಗೆದಾರರೊಂದಿಗೆ ಸಭೆ ನಡೆಸಿ ಇನ್ನೂ ಆರಂಭವಾಗದೇ ಇರುವ ಕೆಲಸಗಳನ್ನು ಬೇಗ ಆರಂಭಿಸುವುದು, ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು ಮತ್ತು ಈಗಾಗಲೇ ಕೆಲಸಗಳು ಪೂರ್ಣಗೊಂಡಲ್ಲಿ ಅನುದಾನ ಖರ್ಚು ಮಾಡುವ ಕುರಿತಂತೆ ಚರ್ಚಿಸಿ, ಸೂಕ್ತ ಯೋಜನೆ ರೂಪಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೆಆರ್‌ಐಡಿಎಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಕೆಕೆಆರ್‌ಡಿಬಿ ಕಾಮಗಾರಿಗಳ ಸ್ಥಿತಿಗತಿಯ ಬಗ್ಗೆ ವಿವರಣೆ ಪಡೆದರು.
ಬೀದರ ನಗರಸಭೆಯಿಂದ 2016-17, 2018-19ನೇ ಸಾಲಿನ ಹಳೆಯ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದಾಗ, ನಗರಸಭೆ ಪೌರಾಯುಕ್ತರು ಮಾತನಾಡಿ, ಹಳೆಯ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಅಳವಡಿಸಬೇಕಿದೆ ಎಂದು ಮಾಹಿತಿ ನೀಡಿದರು.
ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯಿಂದ ನಡೆಯುತ್ತಿರುವ ಕಾಮಗಾರಿಗಳಲ್ಲಿ ಹಲವು ಕಟ್ಟಡ ಕಾಮಗಾರಿಗಳು, ಸಿಸಿ ರಸ್ತೆ, ಒಳಚರಂಡಿ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದರೂ ಸಹ ಅನುದಾನ ಖರ್ಚು ಮಾಡದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಯವರು, ಕಾಮಗಾರಿ ಪೂರ್ಣಗೊಳಿಸುವಲ್ಲಿ ನಿರ್ಲಕ್ಷತನ ತೋರಿಸುವ ಎಲ್ಲ ಅನುಷ್ಠಾನಾಧಿ ಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಗ್ರಾಮೀಣ ಸಡಕ್ ಯೋಜನೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ್, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.