Advertisement

ಬಾಕಿ ಕಾಮಗಾರಿ ತ್ವರಿತ ಪೂರ್ಣಗೊಳಿಸಿ

09:50 AM Dec 04, 2022 | Team Udayavani |

ಬೆಳಗಾವಿ: ಪ್ರಸಕ್ತ ಆರ್ಥಿಕ ವರ್ಷದ ಅಂತಿಮ ಘಟ್ಟದಲ್ಲಿರುವುದರಿಂದ ಪ್ರತಿಯೊಂದು ಇಲಾಖೆಗಳು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ಅನುದಾನ ಮರಳಿ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಹೇಳಿದರು.

Advertisement

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 15ನೇ ಹಣಕಾಸು ಯೋಜನೆಯಡಿ ಅನುದಾನದ ಕಾಮಗಾರಿಗಳನ್ನು ಪರಿಶೀಲಿಸಬೇಕು. ಯಾವುದೇ ಹಂತದಲ್ಲಿ ಅವ್ಯವಹಾರವಾಗದಂತೆ ತಾಲೂಕು ಪಂಚಾಯತ್‌ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ಅಮೃತ ಗ್ರಾಮ ಪಂಚಾಯಿತಿಗಳ ಮೊದಲ ಹಂತದ ಕಾಮಗಾರಿಗಳನ್ನು ಡಿಸೆಂಬರ್‌ ಅಂತ್ಯಕ್ಕೆ ಹಾಗೂ ಎರಡನೇ ಹಂತದ ಕಾಮಗಾರಿಗಳನ್ನು ಮುಂಬರುವ ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಅಮೃತ್‌ ಸರೋವರ ಕಾಮಗಾರಿಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸಬೇಕು. ಎಲ್ಲ ಗ್ರಾಮ ಪಂಚಾಯತ್‌ ಗಳಲ್ಲಿ ಮೊದಲು ಗ್ರಂಥಾಲಯ ಸ್ಥಾಪಿಸಬೇಕು. ನಂತರದ ದಿನಗಳಲ್ಲಿ ಇದನ್ನು ಡಿಜಿಟಲ್‌ ಗ್ರಂಥಾಲಯವಾಗಿ ಪರಿವರ್ತಿಸಬೇಕು ಎಂದರು.

ಜಿಲ್ಲೆಯ ಆರೋಗ್ಯ ಸೌಲಭ್ಯಗಳು ಮತ್ತು 23 ತಜ್ಞ ವೈದ್ಯರ ಕೊರತೆಯ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಕೂಡಲೇ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ತಜ್ಞ ವೈದ್ಯರ ಕೊರತೆಯನ್ನು ನೀಗಿಸಲಾಗುವುದು. ಕೇರಳ ರಾಜ್ಯದ ಮಾದರಿಯಲ್ಲಿ ಶಿಶುಮರಣ ಹಾಗೂ 1 ರಿಂದ 5 ವಯಸ್ಸಿನ ಮಕ್ಕಳ ಮರಣ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾದ ಕ್ರಿಯಾಯೋಜನೆ ರೂಪಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿರುವ ಅನರ್ಹ ಬಿಪಿಎಲ್‌ ಕಾರ್ಡುಗಳನ್ನು ರದ್ದುಪಡಿಸುವುದರ ಜೊತೆಗೆ ಅರ್ಹ ಕುಟುಂಬಗಳನ್ನು ಗುರುತಿಸಿ ಅವರಿಗೆ ಕಾರ್ಡು ವಿತರಿಸಲು ಕ್ರಮ ಕೈಗೊಳ್ಳಬೇಕು.ಆದಾಯ ತೆರಿಗೆ ಪಾವತಿಸುವಂತಹ ವ್ಯಕ್ತಿಗಳ ಬಿಪಿಎಲ್‌ ಕಾರ್ಡು ರದ್ದುಪಡಿಸಬೇಕು ಎಂದರು.

Advertisement

ಶೌಚಾಲಯ ನಿರ್ಮಾಣ: ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಜಿಲ್ಲಾ ಪಂಚಾಯತ್‌ ಹಾಗೂ ನರೇಗಾ ಯೋಜನೆಯಡಿ ಎಲ್ಲ ನೆರವು ನೀಡಲಾಗುತ್ತಿದೆ. ಹೊಸದಾಗಿ ನಿರ್ಮಿಸಲಾದ ಶೌಚಾಲಯಗಳ ನಿರ್ವಹಣೆಗೆ ಆಯಾ ಶಾಲಾ ಮಂಡಳಿ ಅಥವಾ ಮುಖ್ಯೋಪಾಧ್ಯಾಯರು ಅಗತ್ಯ ಕ್ರಮ ವಹಿಸಬೇಕು. ಪ್ರತಿ ಶಾಲೆಯಲ್ಲಿ ಮೂಲಸೌಕರ್ಯ ಇರುವಂತೆ ನೋಡಿಕೊಳ್ಳುವುದು ಮುಖ್ಯೋಪಾಧ್ಯಾಯರ ಕರ್ತವ್ಯವಾಗಿದೆ ಎಂದರು.

ಜಿಲ್ಲೆಯ ಎಲ್ಲ ಅಂಗನವಾಡಿ ಕಟ್ಟಡಗಳ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಅಂಗನವಾಡಿಗೆ ಪೂರೈಕೆಯಾಗುವ ಆಹಾರ ಪದಾರ್ಥಗಳು ಮತ್ತು ಧಾನ್ಯಗಳ ಗುಣಮಟ್ಟವನ್ನು ಹಾಗೂ ಮಕ್ಕಳ ಹಾಜರಾತಿಯನ್ನು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಅಥಣಿ ತಾಲೂಕಿನ ಕೊಕಟನೂರಿನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಕೆರೆ ನಿರ್ಮಾಣ, ಸಸಿ ನೆಡುವುದು ಸೇರಿದಂತೆ ಮಳೆ ನೀರು ಕೊಯ್ಲು ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.

‌ಡಿಭಾಗದ ಜನರಿಗೆ ತುರ್ತು ಚಿಕಿತ್ಸೆ ಒದಗಿಸಲು ಅನುಕೂಲವಾಗುವಂತೆ ಗಡಿಭಾಗದಲ್ಲಿ ಒಂದು ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪಿಸುವ ಅಗತ್ಯವಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಂಜೀವ ಪಾಟೀಲ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿರುವ ಪೊಲೀಸ್‌ ಠಾಣೆಗಳಲ್ಲಿ ಮಹಿಳಾ ಶೌಚಾಲಯ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕಿದೆ. ಈ ನಿಟ್ಟಿನಲ್ಲಿ ಯಾವುದಾದರೂ ಯೋಜನೆಯಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್‌, ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ| ಪ್ರವೀಣ ಬಾಗೇವಾಡಿ, ಡಿಸಿಪಿ ರವೀಂದ್ರ ಗಡಾದಿ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಡಿಎಚ್‌ಒ ಡಾ| ಮಹೇಶ್‌ ಕೋಣಿ ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next