ಕಲಬುರಗಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಹಮ್ಮಿಕೊಂಡಿರುವ ಎಲ್ಲ ಕಾರ್ಯಕ್ರಮಗಳನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಅಧಿನಿಯಮ-2013ರ ಅನ್ವಯ ವಿವಿಧ ಇಲಾಖೆಗಳ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕಾರ್ಯಕ್ರಮಗಳ ಕುರಿತು ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿಯೊಂದು ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಏಳ್ಗೆಗಾಗಿ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎಲ್ಲ ಕಾರ್ಯಕ್ರಮಗಳನ್ನು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಜಾರಿಗೊಳಿಸಬೇಕು ಎಂದು ಹೇಳಿದರು.
ವಿಶೇಷ ವಸತಿ ಯೋಜನೆಯಡಿ ಮನೆಯಿಲ್ಲದ ವಿಧವೆಯರು, ಅಂಗವಿಕಲರು, ಎಚ್.ಐ.ವಿ. ಪೀಡಿತರು, ನಿರ್ಗತಿಕರು, ಕುಷ್ಠರೋಗದಿಂದ ಗುಣಮುಖ ಹೊಂದಿದವರಿಗೆ ವಸತಿ ಕಲ್ಪಿಸಲು ಅವಕಾಶವಿದೆ. ಈ ಕುರಿತು ಸ್ಥಳೀಯವಾಗಿ ಪರಿಶೀಲಿಸಿ, ಅರ್ಹ ಫಲಾನುಭವಿಗಳ ಪಟ್ಟಿಯನ್ನು 10 ದಿನದೊಳಗಾಗಿ ಸಲ್ಲಿಸಬೇಕು ಎಂದು ಹೇಳಿದರು.
ಎಲ್ಲ ಇಲಾಖೆಗಳಲ್ಲಿ ಶೇ. 24 ರ ಅನುದಾನವನ್ನು ಎಸ್‌ಸಿ, ಎಸ್‌ಟಿ ವರ್ಗದ ಶ್ರೇಯೋಭಿವೃದ್ಧಿಗಾಗಿ ಮೀಸಲಿರಿಸಲಾಗಿದ್ದು, ಈ ಅನುದಾನವನ್ನು ಖರ್ಚು ಮಾಡಬೇಕು. ಮುಂದಿನ ಸಭೆಗೆ ಪ್ರತಿ ಇಲಾಖೆಯ ಆರ್ಥಿಕ ಮತ್ತು ಭೌತಿಕ ಸಾಧನೆಯ ಶೇಕಡಾವಾರು ಮಾಹಿತಿಯೊಂದಿಗೆ ಅಧಿಕಾರಿಗಳು ಸಭೆಗೆ ಹಾಜರಾಗಬೇಕು. ಪ್ರತಿ ಇಲಾಖೆಯ ಎಸ್.ಸಿ.ಪಿ., ಟಿ.ಎಸ್.ಪಿ. ಯೋಜನೆಯಡಿ ಹಾಕಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಖುದ್ದಾಗಿ ಪರಿಶೀಲನೆ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆಸೂಚಿಸಿದರು.
ಸಭೆಗೆ ಗೈರು ಹಾಜರಾಗಿದ್ದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಂದಾನವಾಜ್ ಗೇಸುದರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಾಜೀದ ಅಹ್ಮದ್ ಮುಲ್ಲಾ ಸೇರಿದಂತೆ ವಿವಿಧ ಇಲಾಖೆಯ
ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.