ಕಲಬುರಗಿ: ಜಿಲ್ಲೆಯಲ್ಲಿ ವಿವಿಧ ಪ್ರಗತಿ ಹಂತದಲ್ಲಿರುವ ಎಲ್ಲ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳನ್ನು ಬರುವ ಜೂನ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. 2017- 18ನೇ ಸಾಲಿನ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳ ಕ್ರಿಯಾ ಯೋಜನೆಯನ್ನು ಏಪ್ರಿಲ್ ತಿಂಗಳೊಳಗೆ ಪೂರ್ಣಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಸೂಚಿಸಿದರು.
ಶನಿವಾರ ಕಲಬುರಗಿಯಲ್ಲಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮೀಣ ನೀರು ಸರಬರಾಜು ಯೋಜನೆ ಕಾರ್ಯನಿರ್ವಾಹಕ ಇಂಜಿನಿಯರ್ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಯೋಜನೆಗಳ ಪ್ರಗತಿ ಪರಿಶೀಲಿಸಿ ಯೋಜನೆಗಳನ್ನು ಪೂರ್ಣಗೊಳಿಸುವ ಕಟ್ಟುನಿಟ್ಟಿನ ಆದೇಶ ನೀಡಬೇಕಲ್ಲದೇ ಈ ಕುರಿತು ವಾರದೊಳಗೆ ವರದಿ ಸಲ್ಲಿಸಬೇಕು ಎಂದರು.
ಕುಡಿಯುವ ನೀರಿನ ಸಮಸ್ಯಾತ್ಮಕ 64 ಹಳ್ಳಿಗಳ ಕಾಂಟಿಂಜೆಂಟ್ ಪ್ಲಾನ್, ತಾಲೂಕು ಮಟ್ಟದ ಕಾರ್ಯಪಡೆ ಸಮಿತಿ ಪ್ರಸ್ತಾಪಿಸಿದ ಕಾಮಗಾರಿ ಹಾಗೂ ಪ್ರಗತಿ ಹಂತದ ಕುಡಿಯುವ ನೀರಿನ ಪ್ರಗತಿ ಪರಿಶೀಲಿಸಬೇಕು. ಪ್ರತಿ ತಾಲೂಕಿನ ಕುಡಿಯುವ ನೀರಿನ ಯೋಜನೆಗಳ ಕಾಂಟಿಂಜೆಂಟ್ ಪ್ಲಾನ್ ತಯಾರಿಸಬೇಕು.
ಕಾಮಗಾರಿಗಳಲ್ಲಿ ಬೋಗಸ್ ಬಿಲ್ಲುಗಳನ್ನು ತಯಾರಿಸುವುದನ್ನು ಸಹಿಸಲಾಗದು. ಅಧಿಕಾರಿಗಳು ಈ ಕುರಿತು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದರು. ಕಲಬುರಗಿ-ಸೇಡಂ ರಸ್ತೆಯಲ್ಲಿರುವ ವಿಮಾನ ನಿಲ್ದಾಣದ ರನ್‌ವೇ ನಿರ್ಮಾಣ ಕಾಮಗಾರಿಗಳನ್ನು ಮೇ 31ರೊಳಗೆ ಹಾಗೂ ಇತರ ಎಲ್ಲ ಸಿವಿಲ್ ಕಾಮಗಾರಿಗಳನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಬೇಕು. ಬಾಬು ಜಗಜೀವನರಾಂ, ಡಾ| ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ತುರ್ತಾಗಿ ಟೆಂಡರ್ ಪ್ರಕ್ರಿಯೆ ಕೈಗೊಳ್ಳಬೇಕು.
ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಸಂಪೂರ್ಣ ಕಾಳಜಿ ವಹಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್‌ಗೆ ಸೂಚಿಸಿದರು. ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಶಾಸಕ ಡಾ| ಉಮೇಶ ಜಾಧವ, ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ್, ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್, ಜಿಪಂ ಸಿಇಒ ಹೆಪ್ಸಿಬಾ ರಾಣಿ ಕೋರ್ಲಪಾಟಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.