ಯಾದಗಿರಿ: ಪಂಚಾಯತ್ ರಾಜ್ ಇಂಜಿನಿಯರಿಂಗ್, ಪಿಡಬ್ಲ್ಯೂಡಿ ಇಲಾಖೆ, ನಿರ್ಮಿತಿ ಕೇಂದ್ರ, ಕೆಆರ್ ಐಡಿಎಲ್, ವಿಕಲಚೇತನಾ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳಲ್ಲಿನ ಕಾಮಗಾರಿಗಳನ್ನು ತ್ವರಿತಗತಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಅಧಿ ಕಾರಿಗಳು ವಿಳಂಬ ಮಾಡದೇ ಪ್ರಗತಿ ಸಾಧಿಸಲು ಶ್ರಮಿಸಬೇಕು ಎಂದರು. ರಸ್ತೆ, ಸಮುದಾಯ ಭವನ, ಬಸ್ ಶೆಲ್ಟರ್, ದೇವಸ್ಥಾನಗಳ ದುರಸ್ತಿ, ಮತ್ತಿತರ ಕಾಮಗಾರಿಗಳನ್ನು ಕೈಗೊಂಡು ಪ್ರಗತಿ ಸಾಧಿಸಬೇಕು. ಶಾಸಕರು ಪ್ರಸ್ತಾವನೆ ಸಲ್ಲಿಸಿದ ನಿಗದಿತ ದಿನದೊಳಗಾಗಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ಕಾರಣಾಂತರಗಳಿಂದ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗದಿದ್ದ ಸಂದರ್ಭದಲ್ಲಿ ಸೂಕ್ತ ಕಾರಣ ನೀಡಿ ಶಾಸಕರಿಗೆ ಸ್ಪಷ್ಟನೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಅನುಷ್ಠಾನ ಅಧಿಕಾರಿಗಳು ನಿಗದಿತ ಅವಧಿಯೊಳಗೆ ಕಾಮಗಾರಿ ಕೈಗೆತ್ತಿಕೊಂಡು ಆ ಕಾಮಗಾರಿಗಳ ಪ್ರಗತಿ ಮೇಲೆ ಕಣ್ಣಿಡಲು ವರ್ಕ್‌ಸಾಫ್ಟ್ ಎಂಬ ತಂತ್ರಾಂಶ ಸೃಜಿಸಲಾಗಿದೆ. ಶಾಸಕರ ನಿಧಿಯಡಿ ಕೈಗೊಳ್ಳಲಾಗುವ ಕಾಮಗಾರಿಗಳ ಪ್ರಗತಿಯನ್ನು ಕಡ್ಡಾಯವಾಗಿ ಈ ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಬೇಕೆಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿ ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ಅಧಿಕಾರಿಗಳು, ನಿರ್ಮಿತಿ ಕೇಂದ್ರದ ಅಧಿಕಾರಿಗಳು, ಕೆಆರ್‌ಐಡಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.