Advertisement

24*7 ನೀರು ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

11:47 AM Apr 19, 2022 | Team Udayavani |

ಹುಬ್ಬಳ್ಳಿ: ಅವಳಿ ನಗರಗಳಿಗೆ 24*7 ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಯಲ್ಲಿ ಯಾವುದೇ ರೀತಿಯ ಸಮಸ್ಯೆಗಳಾಗಬಾರದೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

Advertisement

ಸೋಮವಾರ ಪ್ರವಾಸಿ ಮಂದಿರದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕುಡಿಯುವ ನೀರು ಸಮಸ್ಯೆಗಳ ಕುರಿತು ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಎಲ್‌ ಆ್ಯಂಡ್‌ ಟಿ ಕಂಪೆನಿಯವರು ಅರ್ಹ ಹೊಸ ನೌಕರರನ್ನು ನೇಮಕ ಮಾಡಿಕೊಂಡು ಶೀಘ್ರಗತಿಯಲ್ಲಿ ಕಾಮಗಾರಿ ಮುಗಿಸಬೇಕು. ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟುಮಾಡದೆ ನೀರು ಸರಬರಾಜು ಕಾಮಗಾರಿ ಪೂರ್ಣಗೊಳಿಸಲು ಸಹಕರಿಸಬೇಕು. 274 ಕೋಟಿ ರೂ. ವೆಚ್ಚದ ಈ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳಬೇಕು. ಏ.26ರೊಳಗೆ ಎಲ್‌ ಆ್ಯಂಡ್‌ ಟಿ ಕಂಪನಿ ಅವರು ಕಾಮಗಾರಿಯನ್ನು ಹಸ್ತಾಂತರ ಮಾಡಿಕೊಳ್ಳಬೇಕು. ಏ.29ರಂದು ಮತ್ತೆ ಸಭೆ ನಡೆಸಿ ಪರಿಶೀಲಿಸಲಾಗುವುದು. ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಕಾಮಗಾರಿಯಲ್ಲಿ ಸಮಸ್ಯೆಗಳು ಉಲ್ಬಣವಾದರೆ ಅದನ್ನು ಚುನಾಯಿತ ಪ್ರತಿನಿಧಿಗಳು ಹಾಗೂ ಆಡಳಿತದ ಗಮನಕ್ಕೆ ತರಬೇಕು. ಸಮಸ್ಯೆಗಳನ್ನು ಪರಿಹರಿಸಲು ಕ್ರಮ ವಹಿಸಲಾಗುವುದು ಎಂದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಾತನಾಡಿ, ಬೆಂಗಳೂರು ಹೊರತುಪಡಿಸಿದರೆ ಹು-ಧಾ ಅವಳಿನಗರ ರಾಜ್ಯದ ಎರಡನೇ ದೊಡ್ಡ ನಗರವಾಗಿದೆ. ಶುದ್ಧ ಕುಡಿಯುವ ನೀರು ಪೂರೈಕೆ ಬಹಳ ಮುಖ್ಯ ಕಾರ್ಯವಾಗಿದೆ. ಸಮರ್ಪಕ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು. ನೀರು ಸರಬರಾಜು ಮಾಡಲು ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಅಧಿಕಾರಿಗಳು ಕ್ರಮವಹಿಸಬೇಕು. ಜಾಕ್‌ವೆಲ್‌ ಸಮಸ್ಯೆಯ ಕಾರಣವನ್ನು ಪುನರಾವರ್ತನೆ ಮಾಡದೆ, ಜನರಿಗೆ ನೀರು ಒದಗಿಸಲು ಆದ್ಯತೆ ನೀಡಬೇಕು. ನೀರು ಸರಬರಾಜಿನಲ್ಲಿ ವ್ಯತ್ಯಯವಾದರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ನೀರಸಾಗರ ಜಲಾಶಯದ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ನೀರು ಸರಬರಾಜು ಮಾಡುವ ಕೊಳವೆ ಮಾರ್ಗದಲ್ಲಿ ಸೋರಿಕೆ ಉಂಟಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣ ಸರಿಪಡಿಸಬೇಕು ಎಂದರು.

Advertisement

ಮಹಾನಗಪಾಲಿಕೆ ಆಯುಕ್ತ ಡಾ| ಬಿ.ಗೋಪಾಲಕೃಷ್ಣ ಮಾತನಾಡಿ, ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದ್ದ ನೀರು ಸರಬರಾಜು ವಲಯ ನಿರ್ವಹಣೆಯನ್ನು ಎಲ್‌ ಆ್ಯಂಡ್‌ ಟಿ ಕಂಪನಿಯವರಿಗೆ ಹಸ್ತಾಂತರಿಸಲಾಗಿದೆ. ಮಧ್ಯಂತರ ನೀರು ಸರಬರಾಜು ವ್ಯವಸ್ಥೆ ಹಸ್ತಾಂತರ ಮಾಡಲು ಟೆಂಡರ್‌ ಕರೆಯಲಾಗಿತ್ತು. ಹೊರ ಗುತ್ತಿಗೆ ನೌಕರರ ಸಂಘ ಧಾರವಾಡ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದರಿಂದ ಟೆಂಡರ್‌ ಪ್ರಕ್ರಿಯೆ ಸ್ಥಗಿತವಾಗಿದೆ.

ಫೆ.25ರಂದು ಧಾರವಾಡ ಉಚ್ಚ ನ್ಯಾಯಾಲಯ ಹೊರಡಿಸಿದ ಮಧ್ಯಂತರ ಆದೇಶದ ಪ್ರಕಾರ ಹೊರಗುತ್ತಿಗೆ ನೌಕರರ ನೋಂದಣಿ ಕಾರ್ಯವನ್ನು ಎಲ್‌ ಆ್ಯಂಡ್‌ ಟಿ ಆಪರೇಟರ್‌ ಅವರು ಆರಂಭಿಸಿದಾಗ ಯಾವುದೇ ನೌಕರರು ನೋಂದಣಿ ಕಾರ್ಯಕ್ಕೆ ಹಾಜರಾಗಲಿಲ್ಲ. ಹೀಗಾಗಿ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಕೂಡಲೇ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಭೆಗೆ ಒತ್ತಾಯಿಸಿದರು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಕೆಯುಐಡಿಎಫ್‌ಸಿ ಕಾರ್ಯನಿರ್ವಾಹಕ ನಿರ್ದೇಶಕ ಸಿದ್ಧಲಿಂಗಯ್ಯ ಹಿರೇಮಠ, ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತ ಶಂಕರಾನಂದ ಬನಶಂಕರಿ, ಎಲ್‌ ಆ್ಯಂಡ್‌ ಟಿ ಕಂಪನಿಯ ಗೋವಿಂದರಾಜ್‌, ಅಭಿಜಿತ್‌ ಸೇರಿದಂತೆ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಇದ್ದರು.

ನೀರಿನ ಕರವನ್ನು ಯಾವುದೇ ಕಾರಣಕ್ಕೂ ಹೆಚ್ಚಿಸಬೇಡಿ. ಹೊಸ ತಂತ್ರಜ್ಞಾನ ಬಳಸಿಕೊಂಡು ವಿದ್ಯುತ್‌ ಪೂರೈಕೆಗೆ ಮುಂದಾಗಬೇಕು. ವಿದ್ಯುತ್‌ ಪಡೆಯಲು ಪರ್ಯಾಯ ಮಾರ್ಗಗಳನ್ನು ಅನುಸರಿಸಬೇಕು. 11 ವಾರ್ಡ್‌ಗಳಲ್ಲಿ ಕೆಯುಐಡಿಎಫ್‌ಸಿಯಿಂದ ನೀರು ಒದಗಿಸಲಾಗುತ್ತಿದೆ. 25 ವಾರ್ಡ್ ಗಳಿಗೆ ಜಲಮಂಡಳಿಯಿಂದ ಶುದ್ಧ ಕುಡಿಯುವ ನೀರು ಒದಗಿಸಲಾಗುತ್ತಿದೆ. ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಉಳಿದ ವಾರ್ಡ್‌ಗಳಿಗೂ ನೀರು ಒದಗಿಸಬೇಕು. ಬೆಳಗಾವಿ ಮತ್ತು ಕಲಬುರಗಿ ನಗರಗಳ ಮಾದರಿಯಲ್ಲಿ ಇಲ್ಲಿನ ಕಾಮಗಾರಿಗಳು ಶೀಘ್ರವಾಗಿ ಪೂರ್ಣಗೊಳ್ಳಬೇಕು.  -ಜಗದೀಶ ಶೆಟ್ಟರ, ಮಾಜಿ ಮುಖ್ಯಮಂತ್ರಿ

24/7 ಶುದ್ಧ ಕುಡಿಯುವ ನೀರುಕಾಮಗಾರಿ ವಿಳಂಬವಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿ ತಮಗೆ ವಹಿಸಿದ ಕೆಲಸವನ್ನು ಸರಿಯಾಗಿ ಮಾಡಿದರೆ ಯಾವುದೇ ಸಮಸ್ಯೆಗಳು ಉದ್ಭವಿಸುವುದಿಲ್ಲ. ಅಧಿಕಾರಿಗಳು ಖುದ್ದಾಗಿ ಕಾಮಗಾರಿ ಪರಿಶೀಲನೆ ಮಾಡಬೇಕು.      -ಅರವಿಂದ ಬೆಲ್ಲದ, ಶಾಸಕ

Advertisement

Udayavani is now on Telegram. Click here to join our channel and stay updated with the latest news.

Next