Advertisement

ಕಾಮಗಾರಿ ಸಕಾಲದಲ್ಲಿ ಪೂರ್ಣಗೊಳಿಸಿ

11:48 AM Sep 21, 2018 | Team Udayavani |

ಬೀದರ: ಜಿಲ್ಲೆಯಲ್ಲಿ ಎಚ್‌ಕೆಆರ್‌ಡಿಬಿ ಅನುದಾನದಲ್ಲಿ ಕೈಗೊಂಡಿರುವ ಎಲ್ಲ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಬೇಕು ಎಂದು ಹೈದ್ರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಬೋಧ್‌ ಯಾದವ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಚ್‌ಕೆಆರ್‌ಡಿಬಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

2015-16, 2016-17 ಹಾಗೂ 2017-18ನೇ ಸಾಲಿನಲ್ಲಿ ವಿವಿಧ ಕಾಮಗಾರಿಗಳಿಗೆ ಮಂಡಳಿಯಿಂದ ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣ ಬಳಕೆ ಮಾಡದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ಇನ್ನೂ ಆರಂಭಿಸದಿರುವ ಹಳೆಯ ಕಾಮಗಾರಿಗಳನ್ನು ರದ್ದುಪಡಿಸಲಾಗುವುದು ಎಂದರು.

ಪ್ರಗತಿ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಅಧಿಕಾರಿಗಳು ಯಾವುದೇ ಪೂರ್ವ ತಯಾರಿಯಿಲ್ಲದೇ ಪ್ರಸ್ತಾವನೆಗಳನ್ನು ಸಲ್ಲಿಸುವುದರಿಂದ ಅನುಷ್ಟಾನ ಸಂದರ್ಭದಲ್ಲಿ ವಿಳಂಬವಾಗುತ್ತಿದೆ. ಹಾಗಾಗಿ ಇನ್ನು ಮುಂದೆ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸುವ ಮುನ್ನ ಅನುಷ್ಠಾನಾಧಿಕಾರಿಗಳು ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿರಬೇಕು. ಕಾಮಗಾರಿ ಕೈಗೆತ್ತಿಕೊಂಡ ನಂತರ ತಿದ್ದುಪಡಿ ಅಥವಾ ಬದಲಾವಣೆಗಳಿಗೆ ಅವಕಾಶ ನೀಡಬಾರದು ಎಂದು ತಿಳಿಸಿದರು.

ಅಧಿಕಾರಿಗಳು ಭೌತಿಕ ಪ್ರಗತಿಯ ಜತೆಗೆ ಆರ್ಥಿಕ ಪ್ರಗತಿ ಸಾಧಿಸಲು ಒತ್ತು ನೀಡಬೇಕು. ಕಾಮಗಾರಿಗಳು ಪೂರ್ಣಗೊಂಡ ತಕ್ಷಣ ಪ್ರಗತಿ ವಿವರಗಳನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ದಾಖಲಿಸಬೇಕು ಎಂದು ತಿಳಿಸಿದರು. ವಿವಿಧ ವಲಯಗಳಲ್ಲಿ ಹಿಂದುಳಿದಿರುವ ಹೈದ್ರಾಬಾದ ಕರ್ನಾಟಕದ ಅಭಿವೃದ್ಧಿಗೆ ಎಚ್‌ಕೆಆರ್‌ಡಿಬಿ ಒಂದು ವರದಾನದಂತಿದ್ದು, ಇದರ ಸದುಪಯೋಗ ಪಡಿಸಿಕೊಳ್ಳಬೇಕು. 

ಆಯಾ ವರ್ಷ ಬಿಡುಗಡೆಯಾದ ಅನುದಾನವು ಅದೇ ವರ್ಷ ಖರ್ಚು ಮಾಡುವ ನಿಟ್ಟಿನಲ್ಲಿ ಮುತುವರ್ಜಿ ವಹಿಸಬೇಕು
ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಣ್ಣ ನೀರಾವರಿ, ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ವಿಭಾಗ, ಲೋಕೋಪಯೋಗಿ ಇಲಾಖೆ, ನಿರ್ಮಿತಿ ಕೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ|ಎಚ್‌.ಆರ್‌. ಮಹಾದೇವ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಆರ್‌.ಸೆಲ್ವಮಣಿ,
ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಎಚ್‌ಕೆಆರ್‌ಡಿಬಿ ಜಂಟಿ ನಿರ್ದೇಶಕ ಬಸವರಾಜ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next