Advertisement

ಕ.ಕ. ಸಮಗ್ರ ಅಭಿವೃದ್ಧಿ ಸರ್ಕಾರ ಬದ್ಧ : ಸಿಂಗ್‌

02:15 PM Sep 18, 2022 | Team Udayavani |

ಕೊಪ್ಪಳ: ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ವಿಶೇಷ ಯೋಜನೆ ಜಾರಿಗೆ ತಂದಿದೆ. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಸರ್ಕಾರವು ಬದ್ಧವಾಗಿದ್ದು ಎಲ್ಲರೂ ಅಭಿವೃದ್ಧಿಗೆ ಕೈ ಜೋಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಹೇಳಿದರು.

Advertisement

ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ 75ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಭಾರತ ಸ್ವಾತಂತ್ರ್ಯ ಪಡೆದಾಗ ನಿಜಾಮರು ಭಾರತ ಒಕ್ಕೂಟಕ್ಕೆ ಸೇರಲು ನಿರಾಕರಿಸಿದ್ದರು. ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯಿ ಪಟೇಲರು ದಿಟ್ಟತನದಿಂದ ಕೈಗೊಂಡ ಕಾರ್ಯಾಚರಣೆಯಿಂದ ನಿಜಾಮನು ಶರಣಾಗಿ, ಈ ಭಾಗವನ್ನು ಭಾರತದ ಒಕ್ಕೂಟಕ್ಕೆ ಸೇರಿಸಿದ. ಆದ್ದರಿಂದ 1948ರ ಸೆ. 17ರಂದು ಈ ಭಾಗಗಳು ರಾಜ್ಯದ ಇತರೆ ಭಾಗಗಳಂತೆ ಸ್ವತಂತ್ರ್ಯವಾದವು ಎಂದರು.

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ, ಧರ್ಮ ಮೊದಲಾದ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆ ನೀಡಿದ ಈ ಪ್ರದೇಶ ವಿಶ್ವವೇ ನಿಬ್ಬೆರಗಾಗುವಂತಹ ಜಗಜ್ಯೋತಿ ಬಸವಣ್ಣನವರು ಸಾಮಾಜಿಕ ಪರಿವರ್ತನೆಗೆ ಬುನಾದಿ ಹಾಕಿದ ಪವಿತ್ರ ಭೂಮಿಯಾಗಿದೆ. ಈ ಪ್ರದೇಶದ ಜನತೆ ಎರಡೆರಡು ಬಾರಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು, ಈ ಭಾಗದ ಜನರ ದೇಶಪ್ರೇಮ ಮತ್ತು ಕೆಚ್ಚೆದೆ ಹೋರಾಟ ಬಿಂಬಿಸುತ್ತದೆ. ಅಂದಿನ ನಿಜಾಮ ಮೀರ್‌ ಉಸ್ಮಾನ್‌ ಅಲಿ ಹೈದರಾಬಾದ್‌ ಪ್ರದೇಶವನ್ನು ಸ್ವತಂತ್ರ್ಯ ರಾಜ್ಯವನ್ನಾಗಿ ಘೋಷಿಸಿಕೊಂಡಿದ್ದರು.

ಹೈದರಾಬಾದ್‌ ಸಂಸ್ಥಾನದಲ್ಲಿ ಇಂದಿನ ತೆಲಂಗಾಣ, ಮಹಾರಾಷ್ಟ್ರದ ಮರಾಠಾವಾಡ ಹಾಗೂ ರಾಜ್ಯದ ಹೈದರಾಬಾದ್‌ ಕರ್ನಾಟಕದ 6 ಜಿಲ್ಲೆಗಳು ಸೇರ್ಪಡೆಯಾಗಿದ್ದವು. 2021ರ ಅ. 2ರಂದು ಬಳ್ಳಾರಿಯಿಂದ ವಿಭಜನೆಗೊಂಡ ಹೊಸಪೇಟೆಯೂ ವಿಜಯನಗರ ಜಿಲ್ಲೆಯಾಗಿ, ಹೈದ್ರಾಬಾದ್‌ ಕರ್ನಾಟಕದ 7ನೇ ಜಿಲ್ಲೆಯಾಗಿ ಸೇರ್ಪಡೆಗೊಂಡಿತು ಎಂದರು.

Advertisement

2019ರ ಸೆ. 9ರಂದು ಎಂದು ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರು ಹೈದರಾಬಾದ್‌ ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಪ್ರದೇಶವನ್ನಾಗಿ ಘೋಷಿಸಿದರು.

ಹೈದ್ರಾಬಾದ್‌ -ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಇದೀಗ ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನಾಗಿ ಆಚರಿಸಲಾಗುತ್ತಿದೆ. ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕಾಗಿಯೇ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಒದಗಿಸಿದ ಮ್ಯಾಕ್ರೋ ಯೋಜನೆ, ಮೈಕ್ರೋ ವಲಯದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿದೆ. ಶಿಕ್ಷಣ ಇಲಾಖೆಯಡಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಒಟ್ಟು ಜಿಲ್ಲೆಗೆ 200 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಒತ್ತು ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ 137 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿದೆ. ಆಹಾರ ಇಲಾಖೆಯಡಿ ಜಿಲ್ಲೆಯಲ್ಲಿ ಆದ್ಯತಾ, ಅಂತ್ಯೋದಯ ಪಡಿತರ ಚೀಟಿ ಹೊಂದಿದ 3,23,754 ಕುಟುಂಬಗಳಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಲೋಕೋಪಯೋಗಿ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೃಷಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪಶುಪಾಲನಾ ಇಲಾಖೆ ಸೇರಿ ವಿವಿಧ ಇಲಾಖೆಗಳ ಪ್ರಗತಿ ಕುರಿತಂತೆ ಭಾಷಣದಲ್ಲಿ ಪ್ರಸ್ತಾಪ ಮಾಡಿದರು. ಶಾಸಕ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್‌ ಅಧ್ಯಕ್ಷತೆ ವಹಿಸಿದ್ದರು.

ಸಂಸದ ಕರಡಿ ಸಂಗಣ್ಣ, ವಿಧಾನ ಪರಿಷತ್‌ ಸದಸ್ಯೆ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷೆ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು, ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್‌, ಎಸ್ಪಿ ಅರುಣಾಂಗುÒ ಗಿರಿ, ಎಡಿಸಿ ಸಾವಿತ್ರಿ ಬಿ. ಕಡಿ, ಎಸಿ ಬಸವಣ್ಣೆಪ್ಪ ಕಲಶೆಟ್ಟಿ, ತಹಶೀಲ್ದಾರ್‌ ವೀಠ್ಠಲ್‌ ಚೌಗಲಾ ಸೇರಿ ಇತರರಿದ್ದರು.

ಆಕರ್ಷಕ ಪಥಸಂಚಲನ: ಕ್ರೀಡಾಂಗಣದಲ್ಲಿ ಪೊಲೀಸ್‌, ಎನ್‌ಸಿಸಿ, ಸೇವಾದಳ, ಸ್ಕೌಟ್ಸ್‌, ಗೈಡ್ಸ್‌, ಅರಣ್ಯ ಇಲಾಖೆ ಹಾಗೂ ಗೃಹ ರಕ್ಷಕ ದಳ ಸೇರಿದಂತೆ ವಿವಿಧ ತಂಡಗಳಿಂದ ಆಕರ್ಷಕ ಪಥಸಂಚಲನ, ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ ನಡೆಯಿತು.

ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಪಥಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದ ಗವಿಸಿದ್ದೇಶ್ವರ ಪ್ರೌಢಶಾಲೆ, ದ್ವಿತೀಯ ಸ್ಥಾನ ಪಡೆದ ಸರ್ಕಾರಿ ಬಾಲಕರ ಪ್ರೌಢಶಾಲೆ ಮತ್ತು ತೃತೀಯ ಸ್ಥಾನ ಪಡೆದ ಎಸ್‌.ವಿ.ಎಂ ಶಾಲೆಯ ತಂಡಕ್ಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದ ಶಾಲೆಯ ತಂಡಕ್ಕೆ ಪ್ರಶಸ್ತಿ ಪತ್ರ ವಿತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next