ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳ 317 ವಸತಿ ಶಾಲೆಗಳಿಗೆ ನೂತನ ಕಟ್ಟಡ ನಿರ್ಮಾಣಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 819 ವಸತಿ ಶಾಲೆಗಳನ್ನು ನಿರ್ವಹಣೆ ಮಾಡಲಾಗುತ್ತಿದೆ. ಅವುಗಳಲ್ಲಿ 420 ಶಾಲೆಗಳು ಸ್ವಂತ ಕಟ್ಟಡ ಹೊಂದಿದ್ದು, 317 ಶಾಲೆಗಳಿಗೆ ಸ್ವಂತ ಕಟ್ಟಡ ಇಲ್ಲದಿರುವುದರಿಂದ ಬಾಡಿಗೆ ಕಟ್ಟಡಗಳಲ್ಲಿ ಶಾಲೆ ನಡೆಸಲಾಗುತ್ತಿದೆ. ವಸತಿ ಶಾಲೆಗಳನ್ನು ನಿರ್ವಹಿಸುತ್ತಿರುವ ಕ್ರೈಸ್ಟ್ ಸಂಸ್ಥೆಗೆ 247 ಕೋಟಿ ರೂ. ಮೀಸಲಿಡಲಾಗಿದೆ.
ಹೊಸ ಕಟ್ಟಡಗಳ ನಿರ್ಮಾಣದ ಹಿನ್ನೆಲೆಯಲ್ಲಿ ಆ ಅಂದಾಜು ಮೊತ್ತ ಪರಿಷ್ಕರಿಸಿ 915 ಕೋಟಿ ರೂ.ನೀಡಲು ತೀರ್ಮಾನಿಸಲಾಗಿದೆ. ಈಗಾಗಲೇ ಹೊಸ ಕಟ್ಟಡಗಳ ನಿರ್ಮಾಣಕ್ಕೆ 102 ನಿವೇಶನಗಳನ್ನು ಗುರುತಿಸಲಾಗಿದ್ದು, ಶೀಘ್ರವೇ ಕಟ್ಟಡ ಕಾಮಗಾರಿ ಆರಂಭಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ, ಕೊಡಗು ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡಲು ಇನ್ಫೋಸಿಸ್ ಸಂಸ್ಥೆ ನೀಡಿದ್ದ 25 ಕೋಟಿ ರೂ. ಅನುದಾನವನ್ನು ವಾಪಸ್ ಪಡೆದಿದೆ ಎಂಬ ಬಿಜೆಪಿ ನಾಯಕರ ಆರೋಪ ತಳ್ಳಿ ಹಾಕಿದ ಅವರು, ಇನ್ಫೋಸಿಸ್ ಸಂಸ್ಥೆ ಸರ್ಕಾರಕ್ಕೆ ನೇರವಾಗಿ ಹಣ ನೀಡಿಲ್ಲ. ಅವರೇ ನೇರವಾಗಿ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಲು ಯೋಜನೆ ರೂಪಿಸಿಕೊಂಡಿದ್ದಾರೆ. ಅದಕ್ಕೆ ಸರ್ಕಾರದ ಸಹಕಾರ ಕೇಳಿದ್ದಾರೆ ಎಂದು ಹೇಳಿದರು.
ಸಂತ್ರಸ್ತರಿಗೆ ನಿವೇಶನ ಹಾಗೂ 10 ಲಕ್ಷ ರೂ. ವೆಚ್ಚದಲ್ಲಿ ಮನೆಗಳನ್ನು ನಿರ್ಮಾಣ ಮಾಡಲು ತೀರ್ಮಾನಿಸಲಾಗಿದ್ದು, ಇಷ್ಟು ವೇಗವಾಗಿ ಕಾಮಗಾರಿ ಹಿಂದಿನ ಯಾವ ಸರ್ಕಾರದಲ್ಲಿಯೂ ಆಗಿರಲಿಲ್ಲ ಎಂದು ತಿಳಿಸಿದರು.