ಮಣಿಪಾಲ: ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಜಿಲ್ಲೆಯ ನೋಡೆಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಪ್ರತಿಶತ ನೂರರಷ್ಟು ಮತದಾನ ನಡೆಯುವಲ್ಲಿ ಸಹಕರಿಸಬೇಕು. ಚುನಾವಣೆ ಘೋಷಣೆಯಾದ ತತ್‌ಕ್ಷಣ ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಶಾಲಾ-ಕಾಲೇಜುಗಳ ಗೋಡೆಯ ಮೇಲಿನ ಬರೆಹ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿರುವ ರಾಜಕೀಯ ಪಕ್ಷಗಳ ಬ್ಯಾನರ್, ಫ್ಲೆಕ್ಸ್, ಹೋರ್ಡಿಂಗ್ಸ್‌ಗಳನ್ನು ತೆರವುಗೊಳಿಸಬೇಕು. ವಿವಿಧ ಇಲಾಖೆಗಳ ವೆಬ್‌ಸೈಟ್ ಹಾಗೂ ಸಾಮಾಜಿಕ ತಾಣಗಳಲ್ಲಿ ಸಚಿವರು ಹಾಗೂ ಜನಪ್ರತಿನಿಧಿಗಳ ಭಾವಚಿತ್ರ ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚುನಾವಣೆ ಕುರಿತು ಅರಿವು ಮೂಡಿಸಲು ವಿವಿಧ ಚಟುವಟಿಕೆಗಳನ್ನು ಆಯೋಜಿಸಿ, ಮತದಾರರು ಹೆಚ್ಚಾಗಿ ಚುನಾವಣ ಪ್ರಕ್ರಿಯೆಯಲ್ಲಿ ಭಾಗವಹಿಸಲು ಕ್ರಮ ವಹಿಸಬೇಕು. ಜಾಗೃತಿ ಮೂಡಿಸಲು ಹಂಚಿಕೆ ಮಾಡಲಾದ ಇವಿಎಂ ಯಂತ್ರಗಳನ್ನು ಹಿಂಪಡೆದುಕೊಳ್ಳುವಂತೆ ತಿಳಿಸಿದರು.
ಚುನಾವಣ ನೀತಿ ಸಂಹಿತೆ ಜಾರಿಯಾದರೆ ಎಂಸಿಎಂಸಿ ತಂಡಗಳು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು. ಸಹಾಯಕ ವೆಚ್ಚ ವೀಕ್ಷಕರು, ಫ್ಲೈಯಿಂಗ್ ಸ್ಕ್ವಾಡ್ ಗಳು, ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳು ಜಾಗೃತರಾಗಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಆಂತರಿಕ ಪ್ರದೇಶಗಳಲ್ಲಿ ಗಾಂಜಾ ಹಾಗೂ ಕಳ್ಳಭಟ್ಟಿ ಸಾಗಾಟ ಸೇರಿದಂತೆ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ಅರಣ್ಯ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು. ಬಂದರುಗಳಿಗೆ ಆಗಮಿಸುವ ಬೋಟುಗಳ ತಪಾಸಣೆಯನ್ನು ಸಹ ಕರಾವಳಿ ಕಾವಲು ಪೊಲೀಸ್ ಅಧಿಕಾರಿಗಳು ನಡೆಸಬೇಕು ಎಂದು ಸೂಚನೆ ನೀಡಿದರು.
ಚುನಾವಣೆ ಘೋಷಣೆ ಅನಂತರ ಯಾವುದೇ ಹೊಸ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಟೆಂಡರ್ ಪ್ರಕಟನೆ ಹೊರಡಿಸಬಾರದು. ಘೋಷಣೆ ಪೂರ್ವದಲ್ಲಿ ಕಾರ್ಯಾದೇಶ ನೀಡಿ, ಚಾಲ್ತಿಯಲ್ಲಿರುವ ಅಭಿವೃದ್ಧಿ ಕಾರ್ಯಗಳ ಕಾಮಗಾರಿ ಕೈಗೊಳ್ಳಬಹುದು ಎಂದರು.
ಜಿ.ಪಂ. ಸಿಇಒ ಪ್ರತೀಕ್ ಬಾಯಲ್, ಎಡಿಸಿ ಮಮತಾ ದೇವಿ ಜಿ.ಎಸ್., ಎಸಿ ರಶ್ಮಿ ಎಸ್., ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಡಿಎಫ್ಒ ಗಣಪತಿ, ಕರಾವಳಿ ಕಾವಲು ಪಡೆಯ ಎಸ್‌ಪಿ ಮಿಥುನ್ ಎಚ್.ಎನ್., ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.