ಬೆಂಗಳೂರು: ಬಿಬಿಎಂಪಿ ಬಜೆಟ್‌ಗೆ ಒಪ್ಪಿಗೆ ನೀಡುವಂತೆ ಆಯುಕ್ತರು ಸರ್ಕಾರಕ್ಕೆ ಬಜೆಟ್ ಪ್ರತಿ ಕಳುಹಿಸಿಕೊಟ್ಟಿದ್ದಾರೆ. ಅದನ್ನು ಪರಿಶೀಲಿಸಿ ಒಪ್ಪಿಗೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ತಮ್ಮ ಸರ್ಕಾರಿ ಕಚೇರಿಯಲ್ಲಿ ಸೋಮವಾರ ನಗರದ ಶಾಸಕರು, ಸಂಸದರ ಸಭೆ ನಡೆಸಿದ ಅವರು, ನಗರದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿಸಿದರು. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
ಬೆಂಗಳೂರಿಗೆ ಸಂಬಂಧಿಸಿದಂತೆ ಕೆಲವು ರಾಜಕೀಯ ಬೆಳವಣಿಗೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ನಗರದ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ್ದೇವೆ. ಮುಂದಿನ ವರ್ಷ ಬಿಬಿಎಂಪಿ ಚುನಾವಣೆ ಬರಲಿದ್ದು, ಆ ಬಗ್ಗೆಯೂ ಚರ್ಚಿಸಿದ್ದೇವೆ ಎಂದರು.
ಮಹಾನಗರ ಪಾಲಿಕೆ ಸದಸ್ಯರ ಜೊತೆ ಶಾಸಕರು, ಮೇಯರ್ ಹಾಗೂ ಉಪ ಮೇಯರ್ ಅನ್ಯೋನ್ಯತೆಯಿಂದ ಕೆಲಸ ಮಾಡುವಂತೆ ಸೂಚಿಸಿದ್ದೇನೆ. ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ಆಸ್ಪತ್ರೆ, ಕ್ರೀಡಾ ಸಮುಚ್ಚಯ ನಿರ್ಮಾಣ, 50 ಅಥವಾ ನೂರು ಎಕರೆ ಸರ್ಕಾರಿ ಜಮೀನು ಇರುವ ಕಡೆ ಪಾರ್ಕ್ ನಿರ್ಮಾಣ ಮಾಡುವ ಬಗ್ಗೆ ಮೇಯರ್, ಉಪ ಮೇಯರ್ ಅಭಿಪ್ರಾಯ ಮಂಡಿಸಿದ್ದಾರೆ. ಎಲ್ಲವನ್ನೂ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
ನಗರದಲ್ಲಿ 1500 ಕೋಟಿ ರೂಪಾಯಿ ರಸ್ತೆ ಅಭಿವೃದ್ಧಿಗೆ ನೀಡಲಾಗಿದೆ. ಆದರೆ, ಬಿಜೆಪಿಯವರು 4500 ಕೋಟಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ಆರೋಪಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕಾಮಗಾರಿಗಳು ವಿಳಂಬವಾಗಿವೆ.
ನೀತಿ ಸಂಹಿತೆ ತೆರವುಗೊಂಡ ನಂತರ ಎಲ್ಲವನ್ನೂ ಪರಿಶೀಲಿಸುತ್ತೇವೆ. ಒಪ್ಪಂದದಂತೆ ನಿಗದಿತ ಸಮಯದಲ್ಲೇ ಕಾಮಗಾರಿಗಳು ಮುಕ್ತಾಯವಾಗಬೇಕು. ವಿಳಂಬ ಮಾಡುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಬಿಬಿಎಂಪಿ ಬಜೆಟ್ ನಮ್ಮ ಕೈ ಸೇರಿದೆ. ಹಾಗಂತ, ಅವರು ಅದರಲ್ಲಿ ಪ್ರಸ್ತಾಪಿಸಿರುವ ಎಲ್ಲದಕ್ಕೂ ಒಪ್ಪಿಗೆ ಸೂಚಿಸುವುದಿಲ್ಲ. ಬದಲಿಗೆ, ಪರಿಶೀಲಿಸಿ ಅನುಮೋದನೆ ನೀಡುತ್ತೇವೆ.
-ಡಾ.ಜಿ. ಪರಮೇಶ್ವರ್, ಉಪಮುಖ್ಯಮಂತ್ರಿ