ಗಂಗಾವತಿ :ತಾಲ್ಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿ ಜಲ ಜೀವನ ಮಿಷನ್ ಕಾಮಗಾರಿ ಮಾಡುವ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದು, ಕಾಂಗ್ರೆಸ್ ಮುಖಂಡನಿಗೆ ತೀವ್ರ ಗಾಯವಾದ ಘಟನೆ ರವಿವಾರ ಜರುಗಿದೆ.
ಪ್ರಕರಣ ದಾಖಲಿಸಲು ವಿಳಂಬ ಮಾಡುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಮಾಜಿ ಸಚಿವ ಶಿವರಾಜ ತಂಗಡಗಿ ಗ್ರಾಮೀಣ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಜಂಗಮರ ಕಲ್ಗುಡಿ ಗ್ರಾಮದಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ 70 ಲಕ್ಷ ಅನುದಾನದಲ್ಲಿ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳುವ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ಜರುಗಿದೆ. ಈ ವೇಳೆ ಬಿಜೆಪಿ ಮುಖಂಡ ಮುರಳಿ ಕೃಷ್ಣ ಎಂಬುವರು ತಮ್ಮ ಟ್ರ್ಯಾಕ್ಟರ್ ನಿಂದ ಕಾಂಗ್ರೆಸ್ ಮುಖಂಡ ವಿ ಪ್ರಸಾದ್ ಅವರಿಗೆ ಡಿಕ್ಕಿ ಹೊಡೆಸಿದ ಪರಿಣಾಮ ಪ್ರಸಾದ್ ತೀವ್ರವಾಗಿ ಗಾಯಗೊಂಡು ಸರಕಾರಿ ಆಸ್ಪತ್ರೆಗೆ ಸೇರ್ಪಡೆಯಾಗಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಟ್ರ್ಯಾಕ್ಟರ್ ಸೀಜ್ ಮಾಡಿ ಆರೋಪಿಯನ್ನು ಬಂಧಿಸುವಲ್ಲಿ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಗ್ರಾಮೀಣ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು .
ಈ ವೇಳೆ ಶಿವರಾಜ್ ತಂಗಡಗಿ ಮಾತನಾಡಿ, ಕನಕಗಿರಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ದೌರ್ಜನ್ಯ ಹೆಚ್ಚಾಗಿದೆ. ಜಂಗಮರ ಕಲ್ಗುಡಿ ಗ್ರಾಮದಲ್ಲಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಯನ್ನು ಕೈಗೊಳ್ಳಲು ಸಮುದಾಯ ವಂತಿಕೆಯನ್ನು ಸಂಗ್ರಹ ಮಾಡಿ ಕಾಮಗಾರಿ ನಡೆಸುವ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮುರಳಿ ಕೃಷ್ಣ ಎನ್ನುವ ವ್ಯಕ್ತಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ಹಾಗೂ ಇತರ ಗ್ರಾಮಸ್ಥರ ಮೇಲೆ ಟ್ರ್ಯಾಕ್ಟರ್ ಹತ್ತಿಸಿದ್ದರಿಂದ ಪ್ರಸಾದ್ ಅವರಿಗೆ ತೀವ್ರ ಗಾಯವಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಗಳ ಅರೆಸ್ಟ್ ಮಾಡಬೇಕು ಮತ್ತು ಟ್ರ್ಯಾಕ್ಟರ್ ನ್ನು ಸೀಜ್ ಮಾಡುವಂತೆ ಮನವಿ ಮಾಡಿದರೂ ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಪ್ರಕರಣ ದಾಖಲಿಸದಂತೆ ಕನಕಗಿರಿ ಶಾಸಕ ದಡೇಸುಗೂರು ಬಸವರಾಜ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ. ಆರೋಪಿಗಳನ್ನು ರಕ್ಷಿಸುವ ಷಡ್ಯಂತ್ರ ನಡೆಸಲಾಗುತ್ತಿದೆ. ಕೂಡಲೇ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದರು .
ಈಗಾಗಲೇ ಪ್ರಕರಣ ದಾಖಲಿಸಲಾಗಿದೆ ಟ್ರ್ಯಾಕ್ಟರ್ ನ ಸೀಜ್ ಮಾಡಿ ಆರೋಪಿಯನ್ನು ಬಂಧಿಸಲು ಪೊಲೀಸ್ ತಂಡವನ್ನು ಕಳುಹಿಸಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಈಗಾಗಲೇ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಕಾಮಗಾರಿ ನಡೆಸದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪಿಎಸ್ ಐ ಶಾರದಮ್ಮ ಈ ವೇಳೆ ಶಿವರಾಜ್ ತಂಗಡಗಿ ಅವರಿಗೆ ಮನವರಿಕೆ ಮಾಡಲು ಯತ್ನಿಸಿದರೂ ಶಿವರಾಜ್ ತಂಗಡಗಿ ಕೂಡಲೇ ಆರೋಪಿ ಬಂಧಿಸುವಂತೆ ಒತ್ತಾಯಿಸಿದರು .
ಈ ವೇಳೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಶರಣೇಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ ,ಸತ್ಯ ಸತ್ಯನಾರಾಯಣ ,ರಮೇಶ್ ಕುಲಕರ್ಣಿ, ಯಮನೂರಪ್ಪ ನಾಯಕ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಗ್ರಾಮೀಣ ಪೊಲೀಸ್ ಠಾಣೆ ಎದುರು ಜಮಾವಣೆಗೊಂಡಿದ್ದರು .