Advertisement

Siddaramaiah ಸತ್ಯಸಂಧತೆಗೆ ಅಭಿನಂದನೆ: ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯ

11:46 PM Mar 10, 2024 | Team Udayavani |

ಬೆಂಗಳೂರು: ಮಂಡ್ಯದಲ್ಲಿ ನಡೆದ ಗ್ಯಾರಂಟಿ ಸಮಾವೇಶದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್‌ ಪಕ್ಷವೇ ಕಾರಣ ಎಂದು ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರ ಸತ್ಯಸಂಧತೆಗೆ ಅಭಿನಂದನೆ ಸಲ್ಲಿಸುವುದಾಗಿ ವ್ಯಂಗ್ಯವಾಡಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ನಿಮ್ಮ ಗೋಮುಖ ವ್ಯಾಘ್ರತನ ಅರಿಯಲು ಇಷ್ಟು ಸಾಕು ಎಂದು ಹರಿಹಾಯ್ದಿದ್ದಾರೆ.

Advertisement

ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ದರಾಮಯ್ಯನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಸತ್ಯ ಗಂಟಲಲ್ಲಿ ಸಿಕ್ಕಿಕೊಂಡ ಬಿಸಿ ತುಪ್ಪದಂತೆ, ಕಕ್ಕಲೇಬೇಕು. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ. ನಿಮ್ಮದೇ ಮಾತುಗಳಲ್ಲಿ ಹೇಳುವುದಾದರೆ. ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ.. ಕಾಂಗ್ರೆಸ್‌ ವೋಟುಗಳಿಂದಲೇ ಗೆದ್ದಿದ್ದು ಆಯಮ್ಮ..! ಇದಲ್ಲವೇ ನಂಬಿಕೆದ್ರೋಹ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಗೋಮುಖವ್ಯಾಘ್ರತನ ಅರಿಯಲು ಇಷ್ಟು ಸಾಕು. ಅಂದು ಕಾಂಗ್ರೆಸ್‌ ಮೈತ್ರಿ ಪಕ್ಷ, ನಿಖೀಲ್‌ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ. ಅವರ ಜತೆಯಲ್ಲೇ ಪ್ರಚಾರದ ಸೋಗಿನಾಟವಾಡಿ, ಮಾಧ್ಯಮಗಳ ಮುಂದೆ ಗೆಲ್ಲಿಸುತ್ತೇವೆಂದು ಪೋಸು ಕೊಡುತ್ತಲೇ ನಿಖೀಲ್‌ ಸುತ್ತ ಶಕುನಿ ವ್ಯೂಹವನ್ನೇ ರಚಿಸಿದ ಕಲಿಯುಗ ಶಕುನಿ ನೀವಲ್ಲದೆ ಮತಾöರು ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ.

ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್‌ನಲ್ಲಿ ಘೋಷಿಸಿದ್ದೀರಿ, ಸರಿ.. ದುಡ್ಡು ಎಲ್ಲಿಟ್ಟಿದ್ದೀರಿ. ನಾನು 2019ರ ಬಜೆಟ್‌ನಲ್ಲಾ ಈ ಕಾರ್ಖಾನೆಗೆ 100 ಕೋ. ರೂ. ತೆಗೆದಿರಿಸಿದ್ದೆ . ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ? ಇಂಥ ಆತ್ಮವಂಚನೆ ಯಾಕೆ ಎಂದು ಪ್ರಶ್ನಿಸಿದ್ದಾರೆ.

Advertisement

ಕರ್ನಾಟಕದ “ನೀರೋ ಸಿದ್ದರಾಮಯ್ಯ’
ಬೆಂಗಳೂರು: ರೋಮ್‌ ಹೊತ್ತಿ ಉರಿಯುತ್ತಿದ್ದರೆ ಅಲ್ಲಿನ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ. ಕರ್ನಾಟಕದಲ್ಲಿ ಜನರು ಬರದಿಂದ ಕಂಗೆಟ್ಟಿದ್ದರೆ ಸಿಎಂ ಸಿದ್ದರಾಮಯ್ಯ ನೀರೋನಂತೆ ವರ್ತಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಡಿಸಿದ್ದಾರೆ. ರಾಜ್ಯದ ಬರ ಪರಿಸ್ಥಿತಿಯನ್ನು ಹಾಗೂ ಜನರ ಸಂಕಷ್ಟವನ್ನು ಅಣಕಿಸುವಂತೆ ಸಿದ್ದರಾಮಯ್ಯ ಅವರ ಸರಕಾರ ವರ್ತಿಸುತ್ತಿದೆ. ಜನರ ತೆರಿಗೆ ಹಣದಲ್ಲಿ ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಾ ಪ್ರಚಾರದ ಜಾತ್ರೆಯಲ್ಲಿ ಮುಳುಗಿದೆ ರಾಜ್ಯ ಇತಿಹಾಸದಲ್ಲಿ ಕಂಡೂ ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ಕಾಂಗ್ರೆಸ್‌ ಸರಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ! ಲಜ್ಜೆಗೇಡು!! ಎಂದು ಹರಿಹಾಯ್ದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next