ನವದೆಹಲಿ: ಸಂಸತ್‌ನ ಬಜೆಟ್ ಅಧಿವೇಶನ ಜ.29ರಂದು ಶುರುವಾಗಲಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡುವ ಭಾಷಣ ಬಹಿಷ್ಕರಿಸಲು ಕಾಂಗ್ರೆಸ್ ನೇತೃತ್ವದ 16 ಪ್ರತಿಪಕ್ಷಗಳು ನಿರ್ಧರಿಸಿವೆ.
ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕು, ಅವುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗಳಿಗೆ ನೈತಿಕ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಸಂಸತ್‌ನಲ್ಲಿ ಬಲವಂತವಾಗಿಯೇ ಮೂರು ಕೃಷಿ ಕಾಯ್ದೆಗಳನ್ನು ಅಂಗೀಕರಿಸಲಾಗಿತ್ತು ಎಂದು ಅವರು ದೂರಿದ್ದಾರೆ. ಜ.26ರಂದು ನಡೆದ ಘಟನೆಗಳಲ್ಲಿ ಕೇಂದ್ರ ಸರ್ಕಾರದ ಕೈವಾಡ ಇರುವ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
2ನೇ ಬಾರಿಗೆ: ಕಳೆದ ವರ್ಷ ಕೂಡ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಪಕ್ಷಗಳು ರಾಷ್ಟ್ರಪತಿ ಭಾಷಣದಿಂದ ದೂರ ಉಳಿದಿದ್ದವು. ಮಾಯಾವತಿ ನೇತೃತ್ವದ ಬಿಎಸ್‌ಪಿ ಹೊರತುಪಡಿಸಿ ಉಳಿದ ಪಕ್ಷಗಳು ಭಾಷಣ ಬಹಿಷ್ಕರಿಸಿದ್ದವು. ಬಿಎಸ್‌ಪಿ ಸಂಸದರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಸಂವಿಧಾನ ಓದುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ:ಹರಿಯಾಣದ 3 ಜಿಲ್ಲೆಗಳಲ್ಲಿ ಇಂಟರ್‌ನೆಟ್ ಬಂದ್; ರೈತರ ತೆರವಿಗೆ ಉಭಯ ಸರಕಾರಗಳ ಹರಸಾಹಸ
ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸುವ ಪ್ರತಿಪಕ್ಷಗಳ ನಿರ್ಧಾರ ದುರದೃಷ್ಟಕರ. ಅದನ್ನು ಪರಿಶೀಲಿಸುವಂತೆ ಮನವಿ ಮಾಡುತ್ತಿದ್ದೇನೆ. ಏಕೆಂದರೆ ರಾಷ್ಟ್ರಪತಿಗಳು ಪಕ್ಷಾತೀತವಾಗಿರುವ ವ್ಯಕ್ತಿ.
– ಪ್ರಹ್ಲಾದ್ ಜೋಶಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ