Advertisement

ಮಡಿಕೇರಿಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಜಂಟಿ ಪ್ರತಿಭಟನೆ

09:39 PM Sep 05, 2019 | Team Udayavani |

ಮಡಿಕೇರಿ: ಕಾಂಗ್ರೆಸ್‌ ಮುಖಂಡ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಾಗೂ ಜೆಡಿಎಸ್‌ ಪಕ್ಷದ ಕಾರ್ಯಕರ್ತರು ನಗರದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಸಿದರು.

Advertisement

ಸುರಿಯುತ್ತಿದ್ದ ಧಾರಾಕಾರ ಮಳೆಯ ನಡುವೆಯೇ ನಗರದ ಗಾಂಧಿ ಮಂಟಪದಿಂದ ಜನರಲ್‌ ತಿಮ್ಮಯ್ಯ ವೃತ್ತದವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು ರಸ್ತೆ ತಡೆ ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಕಾರರು ಬಿಜೆಪಿ ಸರಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭ ಮಾತನಾಡಿದ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್‌ ಕುಮಾರ್‌, ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆಯಾಗುತ್ತಿದೆ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರು ದೇಶದಲ್ಲಿ ವಿರೋಧ ಪಕ್ಷವೇ ಇರಬಾರದೆನ್ನುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್‌ ಮಾತನಾಡಿ, ಇದೊಂದು ರಾಜಕೀಯ ದುರಂತವಾಗಿದ್ದು, ನಾವು ಎಂದೂ ಕಂಡರಿಯದಂತಹ ದ್ವೇಷದ ರಾಜಕಾರಣವನ್ನು ಬಿಜೆಪಿ ಸರ್ಕಾರದಿಂದ ಕಾಣುತ್ತಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisement

2017ರಲ್ಲಿ ನಡೆದ ದಾಳಿಯ ಬಗ್ಗೆ ಉದ್ದೇಶಪೂರ್ವಕವಾಗಿ ಈಗ ವಿಚಾರಣೆ ನಡೆಸಲಾಗುತ್ತಿದೆ. ಇದು ದ್ವೇಷದ ರಾಜಕಾರಣ ಎಂಬುದು ಸಾಮಾನ್ಯ ನಾಗರೀಕನಿಗೂ ತಿಳಿದಿದೆ. ಡಿ.ಕೆ.ಶಿವಕುಮಾರ್‌ ಅವರು ತಪ್ಪು ಮಾಡಿದ್ದರೆ ಕೇವಲ ಒಂದು ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಬಹುದಿತ್ತು. ಆದರೆ ಎರಡು ವರ್ಷಗಳ ಅನಂತರ ಸಂವಿಧಾನಕ್ಕೆ ವಿರುದ್ಧವಾಗಿ ಬಂಧನ ಮಾಡಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದರು.

ಇಂದು ಕಾಂಗ್ರೆಸ್‌ಗೆ ಅನ್ಯಾಯ ವಾಗಿದೆ, ನಾಳೆ ಬೇರೆ ಪಕ್ಷಗಳಿಗೂ ಇಂತಹ ಅನ್ಯಾಯವಾಗುವ ಸಾಧ್ಯತೆ ಇದೆ. ಆದ್ದರಿಂದ ಜಾತ್ಯತೀತ ಮನೋಭಾವದ ಎಲ್ಲ ಪಕ್ಷಗಳು ದ್ವೇಷದ ರಾಜಕಾರಣವನ್ನು ಖಂಡಿಸುವ ಆವಶ್ಯಕತೆ ಇದೆ ಎಂದು ಗಣೇಶ್‌ ಅಭಿಪ್ರಾಯಪಟ್ಟರು.

ಮಾತಿನ ಚಕಮಕಿ
ಇದೇ ಸಂದರ್ಭ ರಸ್ತೆ ತಡೆ ಮಾಡಲು ಹೊರಟ ಪ್ರತಿಭಟನಕಾರರನ್ನು ಪೊಲೀಸರು ತಡೆದರು. ಇದರಿಂದ ಕೆಲಕಾಲ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ವಿಧಾನ ಪರಿಷತ್‌ ಸದಸ್ಯೆ ವೀಣಾ ಅಚ್ಚಯ್ಯ, ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಕೆ.ಎ. ಯಾಕುಬ್‌, ಕಾಂಗ್ರೆಸ್‌ ಅಲ್ಪಸಂಖ್ಯಾಕ‌ರ ಘಟಕದ ಜಿಲ್ಲಾಧ್ಯಕ್ಷ ಎ.ಕೆ. ಹ್ಯಾರಿಸ್‌, ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಪ್ರು ರವೀಂದ್ರ, ನಗರಾಧ್ಯಕ್ಷ ಅಬ್ದುಲ್‌ ರಜಾಕ್‌, ಪ್ರಮುಖರಾದ ಕಾವೇರಮ್ಮ ಸೋಮಣ್ಣ, ಚುಮ್ಮಿ ದೇವಯ್ಯ ಸೇರಿದಂತೆ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next