ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ತೋರಿದ ಕಾಂಗ್ರೆಸ್ ಪಕ್ಷವು ಇದೀಗ ಉತ್ತರ ಪ್ರದೇಶದಲ್ಲಿ ಹೊಸ ಯಾತ್ರೆ ಮಾಡಲು ನಿರ್ಧರಿಸಿದೆ. ಅದು ‘ಧನ್ಯವಾದ ಯಾತ್ರೆ’. ಜೂನ್ 11ರಿಂದ 15ರವರೆಗೆ ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಯಾತ್ರೆ ಕೈಗೊಳ್ಳಲಿದೆ.
ಪಕ್ಷದ ಹಿರಿಯ ನಾಯಕರು ಮತ್ತು ಕಾರ್ಯಕರ್ತರು ಈ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಯಾತ್ರೆಯಲ್ಲಿ ವಿವಿಧ ಸಮುದಾಯದ ಜನರಿಗೆ ಸಂವಿಧಾನದ ಪ್ರತಿ ನೀಡಿ ಗೌರವಿಸಲಾಗುವುದು ಎಂದು ಮೂಲಗಳು ತಿಳಿಸಿದೆ.
80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಆರು ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಅದರ ಮೈತ್ರಿ ಪಕ್ಷ ಸಮಾಜವಾದಿ ಪಕ್ಷವು 37 ಸ್ಥಾನಗಳನ್ನು ಗೆದ್ದುಕೊಂಡಿದೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಮತ್ತು ಎಸ್ ಪಿ ಐದು ಸ್ಥಾನಗಳಲ್ಲಿ ಮಾತ್ರ ಗೆಲುವು ಕಂಡಿತ್ತು.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 62 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಬಾರಿ ಅದರ ಸಂಖ್ಯೆ 33ಕ್ಕೆ ಕುಸಿದಿದೆ.
ಈ ಹಿಂದೆ ಸೋನಿಯಾ ಗಾಂಧಿ ಅವರು ಪ್ರತಿನಿಧಿಸುತ್ತಿದ್ದ ರಾಯ್ ಬರೇಲಿ ಕ್ಷೇತ್ರದಿಂದ ಈ ಬಾರಿ ರಾಹುಲ್ ಗಾಂಧಿ ಸ್ಪರ್ಧೆ ನಡೆಸಿದ್ದು, ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಮೂರು ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಸೋಲಿಸಿದ್ದಾರೆ.