Advertisement

ಪಪಂ ಗದ್ದುಗೆಗೆ ಕೈ-ಕಮಲ ಫೈಟ್

08:27 AM May 27, 2019 | Suhan S |

ಮೊಳಕಾಲ್ಮೂರು: ಇಲ್ಲಿನ ಪಟ್ಟಣ ಪಂಚಾಯತ್‌ ಗದ್ದುಗೇರಲು ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ತುರುಸಿನ ಹಣಾಹಣಿ ನಡೆದಿದ್ದು, ಪಟ್ಟಣ ಪಂಚಾಯತ್‌ ಚುನಾವಣೆ ಬಿಜೆಪಿ ಶಾಸಕ ಬಿ. ಶ್ರೀರಾಮುಲು ಹಾಗೂ ಮಾಜಿ ಶಾಸಕ ಕಾಂಗ್ರೆಸ್‌ನ ಎಸ್‌. ತಿಪ್ಪೇಸ್ವಾಮಿ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

Advertisement

ಪಟ್ಟಣದಲ್ಲಿ ಒಟ್ಟು 12,003 ಮತದಾರರಿದ್ದಾರೆ. ಕಳೆದ ಬಾರಿ 15 ವಾರ್ಡ್‌ಗಳಿದ್ದು, ಕ್ಷೇತ್ರ ಪುನರ್‌ ವಿಂಗಡಣೆಯಿಂದ ಈ ಬಾರಿ ಒಂದು ವಾರ್ಡ್‌ ಹೆಚ್ಚಳವಾಗಿದೆ. 16 ವಾರ್ಡ್‌ಗಳಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌, ಬಿಎಸ್‌ಪಿ ಹಾಗೂ ಪಕ್ಷೇತರ ಸೇರಿ ಒಟ್ಟು 49 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೇ 29ಕ್ಕೆ ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳದ ಜೆಡಿಎಸ್‌, ಕೇವಲ ಮೂರು ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಅಖಾಡದಲ್ಲಿರುವ ಅಭ್ಯರ್ಥಿಗಳು ತಮ್ಮ ತಮ್ಮ ಪಕ್ಷಗಳ ಮುಖಂಡರು ಹಾಗೂ ಬೆಂಬಲಿಗರೊಂದಿಗೆ ಆಯಾ ವಾರ್ಡ್‌ಗಳಲ್ಲಿ ಚುನಾವಣಾ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಬಿರು ಬಿಸಿಲನ್ನೂ ಲೆಕ್ಕಿಸದೆ ಮತದಾರರನ್ನು ಭೇಟಿ ಮಾಡಿ ಮತಯಾಚನೆ ಮಾಡುತ್ತಿದ್ದಾರೆ.

ಯಾವ ವಾರ್ಡ್‌ನಲ್ಲಿ ಯಾರ್ಯಾರಿಗೆ ಪೈಪೋಟಿ?: ಪಟ್ಟಣದ ಒಂದನೇ ವಾರ್ಡ್‌ನಲ್ಲಿ ಕಾಂಗ್ರೆಸ್‌, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಗಳ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಎರಡನೇ ವಾರ್ಡ್‌ನಲ್ಲಿ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಅಭ್ಯರ್ಥಿಗಳ ನಡುವೆ ಸ್ಪರ್ಧೆ ಇದ್ದರೂ, ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ನೇರ ಹಣಾಹಣಿಯನ್ನು ನಿರೀಕ್ಷಿಸಬಹುದು. ಮೂರು ಮತ್ತು ನಾಲ್ಕನೇ ವಾರ್ಡ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ನಡೆಯಲಿದೆ. ಐದನೇ ವಾರ್ಡ್‌ನಲ್ಲಿ ಕಾಂಗ್ರೆಸ್‌, ಬಿಜೆಪಿ ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದರೂ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಆರನೇ ವಾರ್ಡ್‌ನಲ್ಲಿ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದರೂ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳ ನಡುವೆ ಸ್ಪರ್ಧೆ ಇದೆ.

ಏಳನೇ ವಾರ್ಡ್‌ನಲ್ಲಿ ಬಿಜೆಪಿ, ಕಾಂಗ್ರೇಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿಗಳಿದ್ದರೂ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವಿಗಾಗಿ ಸೆಣಸುತ್ತಿದ್ದಾರೆ. ಎಂಟನೇ ವಾರ್ಡ್‌ನಲ್ಲೂ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಒಂಭತ್ತನೇ ವಾರ್ಡ್‌ನಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಪಕ್ಷೇತರ ಅಭ್ಯರ್ಥಿಗಳಿದ್ದು, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಗಳ ಮಧ್ಯೆ ಹಣಾಹಣಿ ನಡೆಯಲಿದೆ. 10ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.

11ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌, ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದು, ತ್ರಿಕೋನ ಸ್ಪರ್ಧೆ ನಡೆಯಲಿದೆ. 12ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌, ಬಿಜೆಪಿ ಮತ್ತು ಇಬ್ಬರು ಪಕ್ಷೇತರರು ಕಣದಲ್ಲಿದ್ದು, ಕಾಂಗ್ರೆಸ್‌ ಮತ್ತು ಪಕ್ಷೇತರರೊಬ್ಬರ ಮಧ್ಯೆ ಪೈಪೋಟಿ ಏರ್ಪಟ್ಟಿದೆ. 13 ನೇ ವಾರ್ಡ್‌ನಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಪಕ್ಷೇತರ ಅಭ್ಯರ್ಥಿಗಳ ಮಧ್ಯೆ ತ್ರಿಕೋನ ಸ್ಪರ್ಧೆ ಇದೆ. 14ನೇ ವಾರ್ಡ್‌ನಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಇಬ್ಬರು ಪಕ್ಷೇತರರಿದ್ದು ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿಗಳ ಮಧ್ಯೆ ತೀವ್ರ ಪೈಪೋಟಿ ನಡೆಯಲಿದೆ. 15ನೇ ವಾರ್ಡ್‌ನಲ್ಲಿ ಬಿಜೆಪಿ, ಕಾಂಗ್ರೆಸ್‌, ಬಿಎಸ್‌ಪಿ ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳಿದ್ದು, ಕಾಂಗ್ರೆಸ್‌, ಬಿ.ಜೆ.ಪಿ ಮತ್ತು ಒಬ್ಬ ಪಕ್ಷೇತರ ಅಭ್ಯರ್ಥಿಗಳ ಮಧ್ಯ ತ್ರಿಕೋಣ ಸ್ಪರ್ಧೆ ಏರ್ಪಡಲಿದೆ. 16ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ಪೈಪೋಟಿ ಏರ್ಪಟ್ಟಿದೆ.

Advertisement

ಈ ಚುನಾವಣೆಯಲ್ಲಿ ಕಾಂಚಾಣ ಸದ್ದು ಮಾಡುತ್ತಿದ್ದು, ಒಂದು ಓಟಿಗೆ ಒಂದು ಸಾವಿರ ರೂ. ನಿಂದ 5 ಸಾವಿರ ರೂ. ವರೆಗೆ ಹಣ ಹಂಚಿಕೆಯಾಗುತ್ತಿದೆ ಎಂಬ ಮಾತು ಕೂಡ ಕೇಳಿ ಬರುತ್ತಿದೆ.

ಕಳೆದ ಸಲ ಏನಾಗಿತ್ತು?:

2013ರಲ್ಲಿ ಮೊಳಕಾಲ್ಮೂರು ಪಪಂಗೆ ಚುನಾವಣೆ ನಡೆದಿತ್ತು. 15 ಸದಸ್ಯ ಬಲದ ಪಪಂನಲ್ಲಿ ಕಾಂಗ್ರೆಸ್‌ 6, ಬಿಎಸ್‌ಆರ್‌ಸಿ 5, ಇಬ್ಬರು ಪಕ್ಷೇತರರು, ಬಿಜೆಪಿ ಹಾಗೂ ಜೆಡಿಎಸ್‌ ತಲಾ ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು. ಮೊದಲ ಅವಧಿಯಲ್ಲಿ ಪಕ್ಷೇತರರು, ಬಿಜೆಪಿ ಹಾಗೂ ಜೆಡಿಎಸ್‌ ಬೆಂಬಲದಿಂದ ಬಿಎಸ್‌ಆರ್‌ಸಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಎರಡನೇ ಅವಧಿಯಲ್ಲಿ ಇಬ್ಬರು ಪಕ್ಷೇತರರು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರಿಂದ ಕಾಂಗ್ರೆಸ್‌ ಪಕ್ಷ ಅಧಿಕಾರ ನಡೆಸಿ ಅವಧಿ ಪೂರ್ಣಗೊಳಿಸಿತ್ತು.
•ಎಸ್‌. ರಾಜಶೇಖರ
Advertisement

Udayavani is now on Telegram. Click here to join our channel and stay updated with the latest news.

Next