ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಎಲ್ಲಾ ಸಿದ್ಧತೆಗಳನ್ನು ಆರಂಭಿಸಿದ್ದು, ಫೆ.23ರಂದು ರಾಯಚೂರಿನಲ್ಲಿ ಮೊದಲ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷದಿಂದ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ರಾಯಚೂರಿನಿಂದ ಸಮಾವೇಶ ಆರಂಭಿಸಲಾಗುವುದು. 24ರಂದು ಹಾವೇರಿ, 27ರಂದು ವಿಜಯಪುರದಲ್ಲಿ ಸಮಾವೇಶ ನಿಗದಿಯಾಗಿದೆ. ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಉಪಮುಖ್ಯಮಂತ್ರಿ ಡಾ|ಜಿ.ಪರಮೇಶ್ವರ್, ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ, ಸಚಿವ ಡಿ.ಕೆ.ಶಿವಕುಮಾರ ಸೇರಿ ಪಕ್ಷದ ಎಲ್ಲಾ ಮುಖಂಡರು ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜ್ಯದಲ್ಲಿ ನಡೆಯುವ ಆಯ್ದ ಸಮಾವೇಶಗಳಿಗೆ ಆಗಮಿಸುವಂತೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಅವರಿಗೆ ಆಹ್ವಾನ ನೀಡಿ ಮನವಿ ಮಾಡಲಾಗಿದೆ ಎಂದು ಹೇಳಿದರು.
ಮಾ.10ರೊಳಗೆ ಪಟ್ಟಿ: ಫೆಬ್ರವರಿ ಮಾಸಾಂತ್ಯಕ್ಕೆ ರಾಜ್ಯದ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ. ಆದರೆ, ಮಾ.10ರೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಕುರಿತು ಫೆ.18ರಂದು ಬೆಂಗಳೂರಿನಲ್ಲಿ ಚುನಾವಣೆ ಸಮಿತಿಯ ಸಭೆ ನಡೆಯಲಿದೆ. ಮಂಡ್ಯ ಕ್ಷೇತ್ರದ ಅಭ್ಯರ್ಥಿ ಕುರಿತು ಹೈಕಮಾಂಡ್ ನಿರ್ಧರಿಸಲಿದೆ ಎಂದರು.