ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್ ಅವರು ಗುರುವಾರ ಬೆಳಗ್ಗೆ ಕ್ರೆಸೆಂಟ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಸಚಿವರಿಗೆ ಉಪಾಹಾರ ಕೂಟ ಆಯೋಜಿಸಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್‌ನ ಸಚಿವರಾದ ಡಿಸಿಎಂ ಡಾ.ಜಿ.ಪರಮೇಶ್ವರ್, ಹಿರಿಯ ಸಚಿವ ಆರ್.ವಿ ದೇಶ್‌ಪಾಂಡೆ ,ಸಚಿವೆ ಜಯಮಾಲಾ, ಪಕ್ಷೇತರ ಶಾಸಕ, ಸಚಿವ ಆರ್.ಶಂಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಚಿವ ರಮೇಶ್ ಜಾರಕಿಹೊಳಿ ಅವರ ಗೈರು ಎದ್ದು ಕಾಣುತ್ತಿತ್ತು.
ಈ ಉಪಹಾರ ಕೂಟವನ್ನು ಸಿದ್ದರಾಮಯ್ಯ ಸಲಹೆಯಂತೆ ಮಾಡಿದ್ದೇವೆ. ಅವರನ್ನು ಯಾವಾಗ ಕರೆಯಬೇಕು ಆವಾಗ ಕರೆಯುತ್ತೇವೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ .
ಮುಂದಿನ ದಿನಗಳಲ್ಲಿ ಬೇರೆ ಬೇರೆ ನಾಯಕರ ನಿವಾಸಗಳಲ್ಲೇ ಸಭೆ ಕರೆದು ಚರ್ಚೆ ನಡೆಸುತ್ತೇವೆ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ಖಾತೆ ಬದಲಾವಣೆ ಇಲ್ಲ
ಇದೇ ವೇಳೆ ಸಚಿವರ ಯಾವುದೇ ಖಾತೆಗಳಲ್ಲಿ ಬದಲಾವಣೆ ಮಾಡುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಸಚಿವ ಜಾರಕಿಹೊಳಿ ಮತ್ತು ದಿನೇಶ್ ಗುಂಡೂರಾವ್ ಅವರು ಪೂರ್ವ ನಿಯೋಜಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ಗೈರಾಗಿದ್ದಾರೆ ಎನ್ನಲಾಗಿದೆ.