ಬೆಂಗಳೂರು: ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ವೈಫಲ್ಯ, 40 ಪರ್ಸೆಂಟ್ ಭ್ರಷ್ಟಾಚಾರ, ಪಿಎಸ್‌ಐ ಹಗರಣ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣ ಸೇರಿ ರಾಜ್ಯ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಪ್ರತಿ ದಿನವೂ ಮುಗಿಬೀಳಲು ಕಾಂಗ್ರೆಸ್ ತೀರ್ಮಾನಿಸಿದೆ.
ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸಮ್ಮುಖದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಸರ್ಕಾರದ ವೈಫಲ್ಯಗಳ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ನಿರಂತರ ಹೋರಾಟ ಮಾಡಲು ನಿರ್ಧರಿಸಲಾಯಿತು.
ವಿಧಾನಪರಿಷತ್ ಹಾಗೂ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಚರ್ಚೆ ಸಂದರ್ಭದಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ತಮ್ಮ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಪ್ರಸ್ತಾಪಿಸಬೇಕು ಎಂದು ಸೂಚನೆ ನೀಡಲಾಯಿತು.
ಬೆಂಗಳೂರಿನ ಶಾಸಕರು ಪ್ರಮುಖವಾಗಿ ನಗರದಲ್ಲಿ ಇತ್ತೀಚೆಗೆ ಮಳೆಯಿಂದ ಉಂಟಾದ ಅನಾಹುತದ ಬಗ್ಗೆ ಗಮನಸೆಳೆಯಬೇಕು. ಪ್ರವಾಹ ಪರಿಹಾರ ಸಿಗದ ಬಗ್ಗೆ ಶಾಸಕರು ಚರ್ಚೆ ವೇಳೆ ಅವಕಾಶ ಸಿಕ್ಕರೆ ತಮ್ಮ ತಮ್ಮ ಕ್ಷೇತ್ರಗಳಲ್ಲಿನ ಸ್ಥಿತಿಗತಿ ಸದನದ ಗಮನಕ್ಕೆ ತರಬೇಕು ಎಂದು ತಿಳಿಸಲಾಯಿತು.
ಕಾಂಗ್ರೆಸ್ ಸರ್ಕಾರದ ಅವಧಿಯ ಅಕ್ರಮಗಳ ಬಗ್ಗೆ ತನಿಖೆ ಮಾಡಿಸುವುದಾಗಿ ಬಿಜೆಪಿ ಹೇಳಿರುವ ಕುರಿತು ಸಭೆಯಲ್ಲಿ ಪ್ರಸ್ತಾಪವಾಗಿ, ನಾವೇ ತನಿಖೆಗೆ ಕೊಡಿ ಎಂದು ಕೇಳ್ಳೋಣ. ಯಾವುದೇ ಹಗರಣ ಆಗಿದ್ದರೂ ತನಿಖೆಗೆ ಸಿದ್ಧವಿದ್ದೇವೆ ಎಂದು ಹೇಳ್ಳೋಣ. ಆ ಮೂಲಕ ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲುಕಿಸೋಣ. ಬಿಜೆಪಿ ಆರೋಪಗಳಿಗೆ ದಾಖಲೆ ಸಹಿತ ತಿರುಗೇಟು ನೀಡೋಣ ಎಂದು ಸಿದ್ದರಾಮಯ್ಯ ಹೇಳಿದರು ಎಂದು ಮೂಲಗಳು ತಿಳಿಸಿವೆ.
ಎಂಟು ವರ್ಷಗಳಲ್ಲಿ ನರೇಂದ್ರ ಮೋದಿ , ಮೂರು ವರ್ಷಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮಾಡಿದ್ದೇನು ಅಭಿಯಾನ, ಉತ್ತಮ ಬೆಂಗಳೂರು ಅಭಿಯಾನ, ಭ್ರಷ್ಟಾಚಾರದ ಬಗ್ಗೆ ಉತ್ತರ ಹೇಳಿ ಅಭಿಯಾನ ಯಶಸ್ವಿಗೊಳಿಸಬೇಕು. ಭಾರತ್ ಜೋಡೋ ಯಾತ್ರೆ ಯಶಸ್ವಿಗೆ ಎಲ್ಲರೂ ಶ್ರಮವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು ಎಂದು ತಿಳಿದು ಬಂದಿದೆ.
ಎಂ.ಬಿ.ಪಾಟೀಲ್, ಡಾ.ಜಿ.ಪರಮೇಶ್ವರ್, ಆರ್.ವಿ.ದೇಶಪಾಂಡೆ, ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಈಶ್ವರ್ ಖಂಡ್ರೆ ಸಭೆಯಲ್ಲಿ ಭಾಗವಹಿಸಿದ್ದರು.