ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಮುಂಬರುವ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಕುರಿತು ಚರ್ಚಿಸಲು ಮೇ 24ರಂದು ಕಾಂಗ್ರೆಸ್ ವಿಶೇಷ ಸಭೆಯನ್ನು ಕರೆದಿದೆ.
ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ರಾಜ್ಯಗಳಲ್ಲಿ ಈ ವರ್ಷ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಚುನಾವಣೆ ರೂಪುರೇಷೆ ಕುರಿತು ಚರ್ಚಿಸಲು ಕಾಂಗ್ರೆಸ್ ವಿಶೇಷ ಸಭೆ ಕರೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದೆ. ತೆಲಂಗಾಣ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢದ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಪ್ರಬಲ ವಿರೋಧ ಪಕ್ಷವಾಗಿದೆ. ತೆಲಂಗಾಣದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ. ಇಲ್ಲಿ ಸ್ಥಳೀಯ ಪಕ್ಷಗಳು ಪ್ರಬಲವಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಹಿಮಾಚಲ ಪ್ರದೇಶ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದೆ.
ಮೇ 24ರ ಸಭೆಯಲ್ಲಿ ರಾಜ್ಯವಾರು ಕಾಂಗ್ರೆಸ್ ಮುಖಂಡರೊಂದಿಗೆ ಪ್ರತ್ಯೇಕವಾಗಿ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಲಿದ್ದಾರೆ. ಈ ವೇಳೆ ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲು ಹಾಗೂ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಿವಿಧ ತಂತ್ರಗಳನ್ನು ರೂಪಿಸುವ ಕುರಿತು ಚರ್ಚೆ ನಡೆಯಲಿದೆ. ಇತ್ತೀಚೆಗೆ ನಡೆದ ಭಾರತ್ ಜೋಡೋ ಯಾತ್ರೆ ಪಕ್ಷದ ಕಾರ್ಯಕರ್ತರಲ್ಲಿ ಹುರುಪು ಮೂಡಿಸಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.