ನವದೆಹಲಿ: 1961ರ ಚುನಾವಣಾ ನಿಯಮಗಳಿಗೆ ಇತ್ತೀಚೆಗೆ ಜಾರಿ ಮಾಡಲಾದ ತಿದ್ದುಪಡಿಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಈ ಬಗ್ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿರುವ ಕಾಂಗ್ರೆಸ್, ಚುನಾವಣಾ ಪ್ರಕ್ರಿಯೆಗಳ ಸಮಗ್ರತೆಯನ್ನು ಪುನಾಸ್ಥಾಪಿಸಲು ಸಹಾಯ ಮಾಡುತ್ತದೆ ಎಂದು ಭರವಸೆ ವ್ಯಕ್ತಪಡಿಸಿದೆ.
ಮತದಾನದ ಪ್ರಕ್ರಿಯೆಗೆ ಸಂಬಂಧಿಸಿದ ಸಿಸಿಟೀವಿ ಕ್ಯಾಮೆರಾ ಮತ್ತು ವೆಬ್‌ಕಾಸ್ಟಿಂಗ್ ದೃಶ್ಯಾವಳಿ ಹಾಗೂ ಅಭ್ಯರ್ಥಿಗಳ ವಿಡಿಯೋ ರೆಕಾರ್ಡಿಂಗ್‌ಗಳನ್ನು ಒಳಗೊಂಡ ಎಲೆಕ್ಟ್ರಾನಿಕ್ ದಾಖಲೆಗಳನ್ನು ತಪಾಸಣೆ ಮಾಡಲು ಸಾರ್ವಜನಿಕರಿಗೆ ಅವಕಾಶ ನೀಡದಿರಲು ಸರ್ಕಾರ ಈ ಬದಲಾವಣೆಗಳನ್ನು ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 1961ರ ಚುನಾವಣಾ ನಿಯಮಗಳಿಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಸುಪ್ರೀಂಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಚುನಾವಣಾ ಆಯೋಗವು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ಹೊಣೆ ಹೊತ್ತಿರುವ ಸಂಸ್ಥೆಯಾಗಿದ್ದು, ಏಕಪಕ್ಷೀಯವಾಗಿ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸದೆ, ಇಂತಹ ನಿರ್ಧಾರಗಳನ್ನು ಕೈಗೊಳ್ಳುವುದು ಸರಿಯಲ್ಲ’ ಎಂದು ಹೇಳಿದ್ದಾರೆ.
ಏನಿದು ಪ್ರಕರಣ?:
ಸಾರ್ವಜನಿಕರಿಗೆ ಈ ಹಿಂದೆ ಲಭ್ಯವಿದ್ದ ಕೆಲ ಚುನಾವಣೆ ದಾಖಲೆ ಮತ್ತು ಕಡತಗಳ ಪರಿಶೀಲನೆಯನ್ನು ನಿರ್ಬಂಧಿಸಿ ನ್ಯಾಯ ಸಚಿವಾಲಯ ತಿದ್ದುಪಡಿ ತಂದಿತ್ತು. ಹೊಸ ತಿದ್ದುಪಡಿಯ ಅನ್ವಯ, ಸಿಸಿಟೀವಿ, ವೆಬ್ ಕ್ಯಾಮ್ ದೃಶ್ಯಾವಳಿ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ವೇಳೆ ಅಭ್ಯರ್ಥಿಗಳ ವಿಡಿಯೋ ರೆಕಾರ್ಡಿಂಗ್‌ಗಳನ್ನು ಸಾರ್ವಜನಿಕರು ವೀಕ್ಷಿಸಲು ಸಾಧ್ಯವಿಲ್ಲ.