ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬಗ್ಗೆ ಕಾಂಗ್ರೆಸಿಗರು ನಡೆಸುತ್ತಿರುವ ನಿರಂತರ ಟೀಕೆಗೆ ಎದಿರೇಟು ನೀಡುವುದಕ್ಕೆ ಬಿಜೆಪಿ ಚಿಂತನೆ ನಡೆಸಿದ್ದು, ಸಿದ್ದರಾಮಯ್ಯ ಬಣದ ಅಹಿಂದ ಅಸ್ತ್ರಕ್ಕೆ ಪ್ರತಿಯಾಗಿ ದಲಿತಾಸ್ತ್ರ ಪ್ರಯೋಗಕ್ಕೆ ಬಿಜೆಪಿ ಮುಂದಾಗಿದೆ.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ವಾಗ್ಧಾಳಿಗೆ ಪ್ರತಿಯಾಗಿ ತಂತ್ರಗಾರಿಕೆ ರೂಪಿಸುವುದಕ್ಕೆ ಬಿಜೆಪಿ ಹಿರಿಯ ನಾಯಕರು ಸೋಮವಾರ ತುರ್ತು ಸಭೆ ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮೊದಲಾದವರು ಸಭೆ ಸೇರಿ ಹೋರಾಟದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದ್ದಾರೆ.
ರಾಜ್ಯಪಾಲ ಗೆಹ್ಲೋಟ್ ದಲಿತ ಸಮುದಾಯಕ್ಕೆ ಸೇರಿದವರು. ಅವರು ಈ ಹಿಂದೆ ಕೇಂದ್ರ ಸಂಪುಟದಲ್ಲಿ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಕಲ್ಯಾಣ ಸಚಿವರಾಗಿದ್ದರು. ತಳ ಹಂತದಿಂದ ಸ್ವಪ್ರಯತ್ನದಿಂದ ಬೆಳೆದು ರಾಜ್ಯಪಾಲರ ಹುದ್ದೆಗೆ ಏರಿದ್ದಾರೆ. ಆದರೆ ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರ ರಕ್ಷಣೆ ನೆಪದಲ್ಲಿ ಒಬ್ಬ ದಲಿತ ನಾಯಕನನ್ನು ಅವಮಾನಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗಿನಿಂದಲೇ ಹೋರಾಟ ರೂಪಿಸಲು ನಿರ್ಧರಿಸಲಾಗಿದ್ದು, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಲಿದ್ದಾರೆ. ಆ ಬಳಿಕ ಬಿಜೆಪಿ ನಿಯೋಗ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರತಿಭಟನೆ
ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸುವುದಕ್ಕೂ ಬಿಜೆಪಿ ನಿರ್ಧರಿಸಿದೆ. ಗುರುವಾರದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ನಡೆಸಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಲು ನಿರ್ಧರಿಸಲಾಗಿದೆ. ಈ ಹೋರಾಟದ ರೂಪುರೇಷೆ ನಿರ್ಧರಿಸುವ ಜವಾಬ್ದಾರಿಯನ್ನು ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್‌ಗೆ ವಹಿಸಲಾಗಿದೆ. ಮುಡಾ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ನಷ್ಟೇ ತೀವ್ರವಾಗಿ ಹೋರಾಟ ರೂಪಿಸಿ ತಿರುಗೇಟು ನೀಡಲು ಬಿಜೆಪಿ ಮುಂದಾಗಿದೆ.