Advertisement

Congress; ಸಂಪುಟ ಪುನರ್ ರಚನೆ ವಿಚಾರ ತಳ್ಳಿ ಹಾಕಿದ ಸಿಎಂ ಸಿದ್ದರಾಮಯ್ಯ

07:31 PM Oct 29, 2023 | Team Udayavani |

ಬೆಂಗಳೂರು: ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆಯನ್ನು ಭಾನುವಾರ ತಳ್ಳಿಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಂತಹ ನಿರ್ಧಾರಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ”ಇಂತಹ ಮಾತುಕತೆ ಅನಗತ್ಯ. 20 ತಿಂಗಳ ನಂತರ ಸಚಿವ ಸಂಪುಟ ಪುನರ್ ರಚನೆಗೆ ಹೊಸ ಮುಖಗಳಿಗೆ ಅವಕಾಶ ನೀಡಲು ಕಾಂಗ್ರೆಸ್ ಶಾಸಕರು ಮುಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ, ಎಲ್ಲ ಶಾಸಕರಿಗೂ ಒಂದೇ ಬೇಡಿಕೆ ಇದೆಯೇ ಎಂದು ಪ್ರಶ್ನಿಸಿ, “ಇದೆಲ್ಲವೂ ಅಸಂಬದ್ಧವಾಗಿದೆ. ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆಯೇ ಹೊರತು ಶಾಸಕರಲ್ಲ ಎಂದರು.

ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ಶಾಸಕರು ನೀಡಿದ ಗೊಂದಲ ಮೂಡಿಸುವ ಹೇಳಿಕೆಗಳು, ಪಕ್ಷದೊಳಗಿನ ವಿದ್ಯಮಾನಗಳಿಂದಾಗಿ ಸಂಪುಟ ಪುನರ್ ರಚನೆ ನಡೆಸಲಾಗುತ್ತಿದೆ ಎನ್ನುವ ಚರ್ಚೆ ಜೋರಾಗಿತ್ತು.

ಜಾತಿ ಗಣತಿ ವರದಿ ಸ್ವೀಕಾರ

”ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಜಾತಿ ಗಣತಿ ವರದಿಯನ್ನು ತಮ್ಮ ಸರಕಾರ ಸ್ವೀಕರಿಸಲಿದೆ” ಎಂದು ಸಿದ್ದರಾಮಯ್ಯ ಹೇಳಿದರು. ”ವರದಿಯನ್ನು ಸಚಿವ ಸಂಪುಟದ ಮುಂದೆ ಮಂಡಿಸಿ ಅಲ್ಲಿ ಚರ್ಚೆ ನಡೆಸಲಾಗುವುದು. ಚರ್ಚೆಯ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದರು.

Advertisement

”ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ವರದಿಯನ್ನು ಸಲ್ಲಿಸುವುದಾಗಿ ಹೇಳಿದ್ದಾರೆ, ಅದನ್ನು ನಾವು ಸ್ವೀಕರಿಸುತ್ತೇವೆ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಎಚ್.ಕಾಂತರಾಜ್ ಅವರು ಸಮೀಕ್ಷೆ ನಡೆಸಿದ್ದು, ಹಿಂದಿನ ಮೂವರು ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ” ಎಂದು ಆರೋಪಿಸಿದರು.

ಇದಕ್ಕೂ ಮುನ್ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ, ”ದೇಶದಲ್ಲಿಯೇ ಮೊದಲ ಬಾರಿಗೆ ಜಾತಿ ಗಣತಿ ನಡೆಸಿದ್ದು ತಮ್ಮ ಸರಕಾರ” ಎಂದು ಹೇಳಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next