Advertisement

ಮೈತ್ರಿಯಿಂದ ಹೊರ ಬರಲು ಕಾಂಗ್ರೆಸ್‌ ಚಿಂತನೆ?

01:43 AM May 24, 2019 | Lakshmi GovindaRaj |

ಬೆಂಗಳೂರು: ಲೋಕಸಭೆ ಫ‌ಲಿತಾಂಶ ರಾಜ್ಯ ಕಾಂಗ್ರೆಸ್‌ನಲ್ಲಿ ಭಾರೀ ಬದಲಾವಣೆಗೆ ಕಾರಣವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಳಪೆ ಸಾಧನೆಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ತೀರ್ಮಾನಗಳೇ ಕಾರಣ ಎಂಬ ಮಾತುಗಳು ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿವೆ.

Advertisement

ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಮೈತ್ರಿ ಪಕ್ಷದೊಂದಿಗೆ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಎಲ್ಲವೂ ಸಿದ್ದರಾಮಯ್ಯ ತಮ್ಮ ಅಣತಿಯಂತೆ ನಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಮೈಸೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ ಕ್ಷೇತ್ರಗಳಲ್ಲಿ ತಾವು ಬಯಸಿದ್ದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿ, ಉಳಿದ ನಾಯಕರ ಅಭಿಪ್ರಾಯಗಳಿಗೆ ಮನ್ನಣೆ ನೀಡಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಲಿಂಗಾಯತ ಸಮುದಾಯ ಕಾಂಗ್ರೆಸ್‌ ಕೈ ಹಿಡಿದಿಲ್ಲ: ಅಲ್ಲದೇ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ವಿರುದ್ಧ ನೀಡಿದ ಹೇಳಿಕೆಗಳೂ ವೀರಶೈವ ಲಿಂಗಾಯತ ಸಮುದಾಯ ಕಾಂಗ್ರೆಸ್‌ನಿಂದ ಸಂಪೂರ್ಣ ಅಂತರ ಕಾಯ್ದುಕೊಳ್ಳುವಂತೆ ಮಾಡಿದೆ. ಉತ್ತರ ಕರ್ನಾಟಕದ 12 ಕ್ಷೇತ್ರಗಳಲ್ಲಿಯೂ ಬಿಜೆಪಿ ಸಂಪೂರ್ಣ ಗೆಲವು ಪಡೆದಿದ್ದು, ಈ ಬಾರಿಯೂ ಲಿಂಗಾಯತ ಸಮುದಾಯ ಕಾಂಗ್ರೆಸ್‌ ಕೈ ಹಿಡಿದಿಲ್ಲ.

ಅದಕ್ಕೆ ಸಿದ್ದರಾಮಯ್ಯನವರ ನಡೆಯೇ ಕಾರಣ ಎಂಬ ಅಭಿಪ್ರಾಯವನ್ನು ಪಕ್ಷದ ಕೆಲವು ನಾಯಕರು ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಇಬ್ಬರೂ ಸಿದ್ದರಾಮಯ್ಯ ಹೇಳಿದಂತೆ ನಡೆದುಕೊಂಡಿ ರುವುದೂ ಕೂಡ ಪಕ್ಷಕ್ಕೆ ಹಿನ್ನೆಡೆಯಾಗಲು ಕಾರಣ ಅಭಿಪ್ರಾಯ ಪಕ್ಷದ ವಲಯದಲ್ಲಿ ಮೂಡಿದೆ.

ಮೈತ್ರಿ ಬಗ್ಗೆಯೂ ಅಪಸ್ವರ: ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಡೆಸಿದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಬಹುತೇಕರು ಮೈತ್ರಿ ಬಗ್ಗೆ ಅಪಸ್ವರ ಎತ್ತಿದ್ದಾರೆ. ಈ ಫ‌ಲಿತಾಂಶದಿಂದ ಭವಿಷ್ಯದಲ್ಲಿ ಕಾಂಗ್ರೆಸ್‌ ಅಸ್ಥಿತ್ವಕ್ಕೆ ಧಕ್ಕೆಯಾಗುವ ಆತಂಕವನ್ನು ಕೆಲವು ನಾಯಕರು ಹೊರ ಹಾಕಿದ್ದು,

Advertisement

ಮೈತ್ರಿಯಿಂದ ಹೊರ ಬಂದು ಪ್ರತಿಪಕ್ಷದಲ್ಲಿ ಕೂಡುವುದು ಉತ್ತಮ ಎಂಬ ಅಭಿಪ್ರಾಯವನ್ನು ಕೆಲವು ಶಾಸಕರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಫ‌ಲಿತಾಂಶದ ಬಗ್ಗೆ ಜೆಡಿಎಸ್‌ ನಡೆ ಏನಾಗಿರುತ್ತದೆ ಎನ್ನುವುದನ್ನೂ ಗಮನಿಸಿ, ಪಕ್ಷದ ಹೈ ಕಮಾಂಡ್‌ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಕಾಂಗ್ರೆಸ್‌ ನಾಯಕರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಉಸ್ತುವಾರಿ ಬದಲಾವಣೆ ಸಾಧ್ಯತೆ: ಲೋಕಸಭೆ ಚುನಾವಣೆಯ ಕಳಪೆ ಸಾಧನೆಯಿಂದ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರನ್ನು ಬದಲಾಯಿಸುವ ಸಾಧ್ಯತೆ ಇದೆ. ಇನ್ನೊಂದೆಡೆ, ಒಂದು ವೇಳೆ, ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಿಂದ ಹೊರ ಬಂದರೂ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಸಿದ್ದರಾಮಯ್ಯಗೆ ನೀಡಲು ಕೆಲವು ನಾಯಕರು ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next