Advertisement
ಕರ್ನಾಟಕದಲ್ಲಿ ಬಿಜೆಪಿ ಬೆಳವಣಿಗೆಯನ್ನು ತಳಮಟ್ಟದಿಂದಲೇ ತಡೆಯಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ಥಳೀಯ ಪರಿಸ್ಥಿತಿ ನೋಡಿಕೊಂಡು ಬಿಜೆಪಿ ಪ್ರಬಲ ಇರುವ ಕಡೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಿ ಎಂದು ರಾಜ್ಯ ನಾಯಕರಿಗೆ ಸಂದೇಶ ರವಾನಿಸಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್ ಅವರು ಶನಿವಾರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಜಿಲ್ಲಾ ಹಾಗೂ ತಾಲೂಕು ಘಟಕಗಳು ಸೇರಿ ಸ್ಥಳೀಯವಾಗಿ ನಿರ್ಧಾರ ಕೈಗೊಳ್ಳಲಿ. ಬಿಜೆಪಿ ಪ್ರಬಲವಾಗಿ ಇರುವ ಕಡೆ ಪ್ರತಿಷ್ಠೆ ಬದಿಗಿಟ್ಟು ಹೊಂದಾಣಿಕೆ ಮಾಡಿಕೊಳ್ಳಿ. ಹೆಚ್ಚು ಕಡೆ ಅಧಿಕಾರ ಹಿಡಿಯವುದು ನಮ್ಮ ಗುರಿಯಾಗಬೇಕು ಎಂದು ಸೂಚನೆ ನೀಡಿದೆ ಎನ್ನಲಾಗಿದೆ.
Related Articles
Advertisement
ಸಿದ್ದರಾಮಯ್ಯ ಪ್ರತಿಪಾದನೆ:ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದೇ ಸೂಕ್ತ. ಕೆಲವೆಡೆ ಮೈತ್ರಿ, ಮತ್ತೆ ಕೆಲವೆಡೆ ಇಲ್ಲ ಎಂದಾದರೆ ಗೊಂದಲ ಉಂಟಾಗಬಹುದು. ಜತೆಗೆ ಒಳ ಒಪ್ಪಂದಗಳಿಗೂ ಅವಕಾಶ ಕೊಟ್ಟಂತಾಗಬಹುದು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ತಳಮಟ್ಟದಲ್ಲಿ ಪಕ್ಷದ ಸಂಘಟನೆ ಹಾಗೂ ಶಕ್ತಿ ಹೆಚ್ಚಾಗಲು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪ್ರತ್ಯೇಕವಾಗಿ ಹೋರಾಟ ನಡೆಸುವುದು ಸೂಕ್ತ. ಇದರಿಂದ ಪಕ್ಷಕ್ಕೆ ಲಾಭವಾಗುತ್ತದೆ ಎಂದು ಹೇಳಿರುವುದಾಗಿ ತಿಳಿದು ಬಂದಿದೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಕ್ಷೇತ್ರಗಳ ಜತೆಗೆ ಸೋಲು ಅನುಭವಿಸಿರುವ ಕ್ಷೇತ್ರಗಳಲ್ಲಿ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯುವ ಪ್ರಯತ್ನ ಮಾಡಬೇಕು. ಮಂಡ್ಯ,ಹಾಸನ, ತುಮಕೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಕಾಂಗ್ರೆಸ್ ಶಕ್ತಿ ಹೆಚ್ಚಿಸಿಕೊಳ್ಳಬೇಕಾಗಿದೆ. ಇದರಿಂದ ನಮಗೆ ಲೋಕಸಭೆ ಚುನಾವಣೆಯಲ್ಲಿ ಲಾಭವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪ್ರತ್ಯೇಕವಾಗಿಯೇ ಸ್ಪರ್ಧೆ ಮಾಡಿ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರ ಹಿಡಿಯುವ ಸಂದರ್ಭದಲ್ಲಿ ಬೇಕಾದರೆ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಬಹುದು. ಈ ಹಿಂದೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮಯದಲ್ಲಿ ನಗರ ಸ್ಥಳೀಯ ಸಂಸ್ಥೆ ಹಾಗೂ ಜಿಲ್ಲಾ ಮತ್ತು ತಾಲೂಕುಪಂಚಾಯತ್‌ಗಳಲ್ಲಿ ಆ ರೀತಿ ಅಧಿಕಾರ ಹಿಡಿದ ಉದಾಹರಣೆಯಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಈ ಮಧ್ಯೆ, ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಹೇಗೆ ಕಟ್ಟಿಹಾಕಬಹುದು. ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟು ಹೇಗೆ ಹೋರಾಟ ರೂಪಿಸಬಹುದು ಎಂಬ ಬಗ್ಗೆಯೂ ಸಿದ್ದರಾಮಯ್ಯ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ. ಬಿಜೆಪಿ ಪ್ರಬಲವಾಗಿರುವ ಕಡೆ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಿ ಎಂಬ ಹೈಕಮಾಂಡ್ ಸಂದೇಶದ ಹಿನ್ನೆಲೆಯಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶನಿವಾರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದರು. ಮೈತ್ರಿ ಮಾಡಿಕೊಳ್ಳುವುದೇ ಆದರೆ ಎಲ್ಲೆಲ್ಲಿ ಸಾಧ್ಯವಿದೆ ಎಂಬುದರ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ. ನಗರ ಸ್ಥಳೀಯ ಸಂಸ್ಥೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ. ದೇವೇಗೌಡರ ಭೇಟಿ ಸಂದರ್ಭದಲ್ಲಿ ಆ ವಿಚಾರ ಪ್ರಸ್ತಾಪಿಸಿಲ್ಲ. ಸಮನ್ವಯ ಸಮಿತಿಗೆ ಕೆಪಿಸಿಸಿ ಅಧ್ಯಕ್ಷನಾಗಿ ಸೇರ್ಪಡೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ.
– ದಿನೇಶ್‌ಗುಂಡೂರಾವ್