Advertisement

ಪರಿಷತ್‌ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌-ಜೆಡಿಎಸ್‌ ಪೈಪೋಟಿ

06:45 AM Jun 23, 2018 | |

ಬೆಂಗಳೂರು: ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕಾಗಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಪೈಪೋಟಿ
ಆರಂಭವಾಗಿದೆ.

Advertisement

ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಅವರ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಹೊಸ ಸಭಾಪತಿ ಆಯ್ಕೆಯಾಗಬೇಕಿದೆ.

ಮೇಲ್ಮನೆಯ ಒಟ್ಟು 75 ಸ್ಥಾನಗಳ ಪೈಕಿ ಐದು ಸ್ಥಾನ ಖಾಲಿ ಇದ್ದು, 70 ಸದಸ್ಯರಲ್ಲಿ ಕಾಂಗ್ರೆಸ್‌ 35, ಬಿಜೆಪಿ 18, ಜೆಡಿಎಸ್‌ 15 ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ.

ಸಂಖ್ಯಾಬಲದ ಪ್ರಕಾರ ಕಾಂಗ್ರೆಸ್‌ ಹೆಚ್ಚು ಸ್ಥಾನ ಹೊಂದಿರುವುದರಿಂದ ಸಭಾಪತಿ ಹಾಗೂ ಉಪ ಸಭಾಪತಿ
ಎರಡೂ ಸ್ಥಾನಗಳು ಕಾಂಗ್ರೆಸ್‌ಗೆ ಲಭಿಸಲಿವೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಇರುವ
ಕಾರಣ ಎರಡೂ ಪಕ್ಷಗಳು ಇಲ್ಲೂ ಹುದ್ದೆ ಹಂಚಿಕೊಳ್ಳುವ ಸಾಧ್ಯತೆಯಿದೆ.

ವಿಧಾನಸಭೆಯಲ್ಲಿ ಸ್ಪೀಕರ್‌ ಸ್ಥಾನ ಕಾಂಗ್ರೆಸ್‌ಗೆ, ಉಪ ಸಭಾಧ್ಯಕ್ಷ ಸ್ಥಾನ ಜೆಡಿಎಸ್‌ಗಿದ್ದು, ಅದೇ ಮಾದರಿಯನ್ನು
ಇಲ್ಲೂ ಅನುಸರಿಸಬೇಕು ಎಂಬುದು ಕಾಂಗ್ರೆಸ್‌ ಮುಖಂಡರ ವಾದ. ಆದರೆ, ಜೆಡಿಎಸ್‌ನವರು ವಿಧಾನಸಭೆಯಲ್ಲಿ ಸ್ಪೀಕರ್‌ ಸ್ಥಾನ ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಪರಿಷತ್‌ನಲ್ಲಿ ನಮಗೆ ಸಭಾಪತಿ ಸ್ಥಾನ ಬಿಟ್ಟು ಕೊಡಬೇಕು ಎಂಬ ವಾದ ಮುಂದಿಟ್ಟಿದ್ದಾರೆ.

Advertisement

ಕಾಂಗ್ರೆಸ್‌ನಲ್ಲಿ ಸಭಾಪತಿ ಸ್ಥಾನಕ್ಕೆ ಎಸ್‌.ಆರ್‌.ಪಾಟೀಲ್‌, ವಿ.ಎಸ್‌.ಉಗ್ರಪ್ಪ ಅವರ ಹೆಸರು ಪರಿಶೀಲನೆಯಲ್ಲಿದೆ. 
ಜೆಡಿಎಸ್‌ನಲ್ಲಿ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರ ಹೆಸರು ಪ್ರಸ್ತಾಪವಿದ್ದು, ಅವರಿಗೆ ಮಂತ್ರಿ ಸ್ಥಾನ ಕೊಡಲು ಸಾಧ್ಯವಾಗದಿರುವುದಕ್ಕೆ ಸಭಾಪತಿ ಮಾಡುವ ಚಿಂತನೆಯಿದೆ. ಆದರೆ, ಎಸ್‌.ಆರ್‌.ಪಾಟೀಲ್‌ ಅವರಿಗೂ ಸಚಿವ ಸ್ಥಾನ ಕೊಡಲು ಸಾಧ್ಯವಾಗದ ಕಾರಣ ಕಾಂಗ್ರೆಸ್‌ ಸಭಾಪತಿ ಸ್ಥಾನ ನೀಡಿ ಲಿಂಗಾಯತ ಸಮುದಾಯಕ್ಕೆ ಅವಕಾಶ ಕೊಡಲು ಮುಂದಾಗಿದೆ ಎಂದು ಹೇಳಲಾಗಿದೆ.

ಎಸ್‌.ಆರ್‌.ಪಾಟೀಲ್‌ ಪರ ಸಿದ್ದರಾಮಯ್ಯ ಒಲವು ತೋರಿದ್ದಾರೆ. ಬಸವರಾಜ ಹೊರಟ್ಟಿ ಅವರಿಗೆ ಸಭಾಪತಿ
ಸ್ಥಾನ ಕೊಡಿಸಲು ದೇವೇಗೌಡರು ಕಾಂಗ್ರೆಸ್‌ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next