Advertisement

ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಬಂಧನ

09:41 AM Sep 04, 2019 | mahesh |

ಬೆಂಗಳೂರು : ದೆಹಲಿಯಲ್ಲಿ ಪತ್ತೆಯಾದ ದಾಖಲೆ ಇಲ್ಲದ 8.5 ಕೋಟಿ ರೂ. ಹಣಕಾಸು ಅವ್ಯವಹಾರ ಆರೋಪ ಎದುರಿಸುತ್ತಿರುವ ಡಿ ಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಬಂಧಿಸಿದೆ. ಶಿವಕುಮಾರ್ ಅವರನ್ನು ಹಣಕಾಸು ಅವ್ಯವಹಾರ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Advertisement

29 ಗಂಟೆಗಳ ಸುದೀರ್ಘ ವಿಚಾರಣೆಯ ಬಳಿಕ ಮಾಜೀ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.

ಕಳೆದ ವರ್ಷ ಸೆಪ್ಟಂಬರ್ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯದ ನಿರ್ದೇಶಕರು ಡಿ ಕೆ ಶಿವಕುಮಾರ್ ಮತ್ತು ನವದೆಹಲಿಯಲ್ಲಿರುವ ಕರ್ನಾಟಕ ಭವನದ ಉದ್ಯೋಗಿ ಆಗಿರುವ ಹನುಮಂತಯ್ಯ ಅವರ ಮೇಲೆ ಹಣಕಾಸು ಅವ್ಯವಹಾರ ಪ್ರಕರಣವನ್ನು ದಾಖಲಿಸಿಕೊಂಡಿತ್ತು.

ಕೋಟಿಗಟ್ಟಲೆ ತೆರಿಗೆ ವಂಚನೆ ಮತ್ತು ಹವಾಲಾ ವ್ಯವಹಾರಗಳಿಗೆ ಸಂಬಂದಿಸಿದಂತೆ ಶಿವಕುಮಾರ್ ವಿರುದ್ಧ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಆದಾಯ ತೆರಿಗೆ ಇಲಾಖೆಯು ಕಳೆದ ವರ್ಷ ದಾಖಲಿಸಿದ್ದ ದೋಷಾರೋಪ ಪಟ್ಟಿ (ಪ್ರಾಸಿಕ್ಯೂಷನ್ ದೂರು) ಆಧಾರದ ಮೇಲೆ ಜಾರಿ ನಿರ್ದೇಶನಾಲಯವು ಶಿವಕುಮಾರ್ ವಿರುದ್ಧ ಈ ಪ್ರಕರಣವನ್ನು ದಾಖಲಿಸಿಕೊಂಡಿತ್ತು.

ಬೆಂಬಲಿಗರ ಆಕ್ರೋಶ
ಒಂದು ಕಡೆ ಡಿಕೆ ಶಿವಕುಮಾರ್ ಬಂಧನ ವಿಚಾರ ಗೊತ್ತಾಗುತ್ತಿದ್ದಂತೆ ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಕಛೇರಿ ಆವರಣದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದ್ದು, ಶಿವಕುಮಾರ್ ಬೆಂಬಲಿಗರು ಇಡಿ ಕಛೇರಿ ಆವರಣದಲ್ಲಿ ಜಮಾಯಿಸತೊಡಗಿದ್ದಾರೆ.

Advertisement

ಶಿವಕುಮಾರ್ ಅವರನ್ನು ಇದೀಗ ನವದೆಹಲಿಯ ಜಾರಿ ನಿರ್ದೇಶನಾಲಯ ಕಛೇರಿಯಿಂದ ಹೊರಕ್ಕೆ ಕರೆತರಲಾಗಿದೆ. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಡಿಕೆಶಿ ಬೆಂಬಲಿಗರು ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಶಿವಕುಮಾರ್ ಅವರನ್ನು ಇದೀಗ ದೆಹಲಿಯ RML ಆಸ್ಪತ್ರೆಗೆ ಕರೆತರಲಾಗಿದೆ. ಬಳಿಕ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next