ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದ ರಾಜ್ಯ ಕಾಂಗ್ರೆಸ್ ನ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಶರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ಹಿನ್ನಲೆಯಲ್ಲಿ ಅವರನ್ನು ಇಂದು ರಾತ್ರಿ ಜೈಲಿನಿಂದ ಬಿಡುಗಡೆಗೊಳಿಸಲಾಯಿತು. ಈ ಮೂಲಕ ಕಳೆದ 48 ದಿನಗಳಿಂದ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದ ಡಿಕೆಶಿಗೆ ಸದ್ಯಕ್ಕೊಂದು ರಿಲೀಫ್ ಸಿಕ್ಕಿದಂತಾಗಿದೆ.
ಶಿವಕುಮಾರ್ ಅವರು ತಿಹಾರ್ ಜೈಲಿನಿಂದ ಹೊರಬರುತ್ತಿದ್ದಂತೆ ಜೈಲು ಆವರಣದಲ್ಲಿ ಕಾಯುತ್ತಿದ್ದ ಅವರ ಬೆಂಬಲಿಗರು ತಮ್ಮ ನಾಯಕನನ್ನು ಬರಮಾಡಿಕೊಂಡರು. ಡಿ ಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ಅವರಂತೂ ಒಂದು ಹಂತದಲ್ಲಿ ಅಣ್ಣನನ್ನು ಜೈಲಿನಿಂದ ಹೊರಗಡೆ ನೋಡುತ್ತಿರುವ ಖುಷಿಯಲ್ಲಿ ಕಣ್ಣೀರು ಹಾಕಿದ ಪ್ರಸಂಗವೂ ನಡೆಯಿತು.
ಜೈಲಿನಿಂದ ಹೊರಬಂದ ಕೂಡಲೇ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಕುಮಾರ್ ಅವರು, ದೆಹಲಿ ಹೈಕೋರ್ಟ್ ನನಗೆ ಜಾಮೀನು ಮಂಜೂರು ಮಾಡಿದೆ ಈ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಾನು ಇರಿಸಿದ್ದ ನಂಬಿಕೆ ಹುಸಿಯಾಗಲಿಲ್ಲ. ನಾನು ಜೈಲಿನಲ್ಲಿದ್ದಷ್ಟು ದಿನ ನನ್ನ ಕುರಿತಾಗಿ ಕಾಳಜಿ ವ್ಯಕ್ತಪಡಿಸಿದ ಎಲ್ಲರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಹೇಳಿದರು.
ಇದಕ್ಕೂ ಮೊದಲು ಬುಧವಾರದಂದು ಡಿ ಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಅವರಿಗೆ ಶರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ಶಿವಕುಮಾರ್ ಅವರ ಆರೋಗ್ಯ ಪರಿಸ್ಥಿತಿಯನ್ನು ಪ್ರಮುಖವಾಗಿ ಗಣನೆಗೆ ತೆಗೆದುಕೊಂಡಿತ್ತು.
ಮಂಗಳವಾರದಂದು ಎರಡೂ ಕಡೆಯ ವಾದ ಪ್ರತಿವಾದಗಳನ್ನು ಆಲಿಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರು ಅರ್ಜಿಯ ಮೇಲಿನ ತಮ್ಮ ತೀರ್ಪನ್ನು ಬುಧವಾರಕ್ಕೆ ಕಾಯ್ದಿರಿಸಿದ್ದರು.