ಬೆಂಗಳೂರು: ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಿದ ನಂತರ ಸಂಪುಟ ವಿಸ್ತರಣೆ ಕುರಿತಂತೆ ಹೈ ಕಮಾಂಡ್ ಜೊತೆ ಚರ್ಚಿಸಲು ಕೈ ನಾಯಕರು ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾಗಿರುವ ಎಸ್.ಆರ್. ಪಾಟೀಲ್, ದಿನೇಶ್ ಗುಂಡೂರಾವ್ ದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಹಾಗೂ ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲಿದ್ದಾರೆ.
ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ಗೆ ಉಪ ಮುಖ್ಯಮಂತ್ರಿ ಸೇರಿ 22 ಸಚಿವ ಸ್ಥಾನ ದೊರೆಯಲಿದ್ದು, ಕಾಂಗ್ರೆಸ್ ಜಾತಿ, ಪ್ರಾದೇಶಿಕತೆ ಆಧಾರದ ಮೇಲೆ ಸಚಿವರನ್ನು ಆಯ್ಕೆ ಮಾಡಲು ಚಿಂತನೆ ನಡೆಸಿದ್ದು, ಪ್ರಮುಖವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರಿಗೆ ಹೆಚ್ಚಿನ ಆದ್ಯತೆ ದೊರೆಯುವ ಸಾಧ್ಯತೆ ಇದೆ ಎಂಬ ಮಾತು ಪಕ್ಷದ ವಲಯದಲ್ಲಿ ಕೇಳಿ ಬರುತ್ತಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪುತ್ರ ಡಾ. ಯತೀಂದ್ರಗೆ ಮಂತ್ರಿ ಸ್ಥಾನ ಕೊಡಿಸಲು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಅದೇ ರೀತಿ ಮಲ್ಲಿಕಾರ್ಜುನ ಖರ್ಗೆ ತಮ್ಮ ಪುತ್ರ ಪ್ರಿಯಾಂಕ್ ಖರ್ಗೆಗೆ ಈ ಬಾರಿಯೂ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಮುಂದಾಗಿದ್ದು, ಸಂಸದ ಕೆ.ಎಚ್. ಮುನಿಯಪ್ಪ ತಮ್ಮ ಪುತ್ರಿ ರೂಪಾ ಶಶಿಧರ ಅವರನ್ನು ಮಹಿಳಾ ಕೋಟಾದಲ್ಲಿ ಸಂಪುಟದಲ್ಲಿ ಸೇರಿಸಲು ಹೈ ಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.
ಹಿಂದಿನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ ಹಿರಿಯ ನಾಯಕರಿಗೆ ಪಕ್ಷ ಸಂಘಟನೆಯ ಜವಾಬ್ದಾರಿ ವಹಿಸಿ ಹೊಸ ಮುಖಗಳಿಗೆ ಆದ್ಯತೆ ನೀಡಬೇಕೆಂಬ ಬೇಡಿಕೆ ಹೆಚ್ಚಾಗಿದೆ. ಅಲ್ಲದೇ ಕಳೆದ ಬಾರಿ ಸಚಿವ ಸ್ಥಾನ ವಂಚಿತರು ಈ ಬಾರಿ ತಮಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು ಹಿಡಿದಿರುವುದು ಕೈ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಇದೆಲ್ಲದವರ ನಡುವೆ ಅನೇಕ ಸಚಿವಾಕಾಂಕ್ಷಿಗಳು ಪಕ್ಷದ ನಾಯಕರ ಮನವೊಲಿಸುವ ಬದಲು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ಸಂಪುಟದಲ್ಲಿ ಸೇರ್ಪಡೆಯಾಗಲು ಪ್ರಯತ್ನ ನಡೆಸಿದ್ದು, ಕೈ ನಾಯಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ದೇವೇಗೌಡರು ಪರೋಕ್ಷವಾಗಿ ಸಮ್ಮಿಶ್ರ ಸರ್ಕಾರದ ಮೇಲೆ ಹಿಡಿತ ಸಾಧಿಸಲು ತಾವು ಸೂಚಿಸಿದವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಸೂಚಿಸಿದರೆ, ಅವರ ಮಾತನ್ನು ತಳ್ಳಿ ಹಾಕುವ ಸ್ಥಿತಿಯಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಇಲ್ಲ. ಹೀಗಾಗಿ ಅನೇಕ ಹಿರಿಯ ಶಾಸಕರು ದೇವೇಗೌಡರ ಮೂಲಕ ಕಾಂಗ್ರೆಸ್ ಹೈ ಕಮಾಂಡ್ ಮೇಲೆ ಒತ್ತಡ ಹೇರಲು ಪ್ರಯತ್ನ ನಡೆಸಿದ್ದಾರೆ.
ಇದೇ ವೇಳೆ ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಪಕ್ಷದ ನಾಲ್ವರು ಅಭ್ಯರ್ಥಿಗಳ ಆಯ್ಕೆ ಕುರಿತಂತೆಯೂ ಹೈ ಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.