ಸೊರಬ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪುತ್ರ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ತಾಲೂಕು ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಿದ್ದ ಪಕ್ಷದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆದಿದೆ. ಮಧು ಕಾಂಗ್ರೆಸ್ ಸೇರ್ಪಡೆಗೊಳ್ಳುವುದು ಪಕ್ಷದ ಸಂಘಟನೆ ದೃಷ್ಟಿಯಿಂದ ಅನುಕೂಲವಾಗಲಿದೆ. ಜೊತೆಗೆ ಕಾಂಗ್ರೆಸ್ ಪಕ್ಷಕ್ಕೆ ಯಾರೇ ಸೇರ್ಪಡೆಯಾದರೂ ಸ್ವಾಗತ ಎಂದು ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಸ್ಪಷ್ಟಪಡಿಸಿದರು.
ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ರೈತರನ್ನು ಭೂ ರಹಿರನ್ನಾಗಿಸುವ ಹುನ್ನಾರ ನಡೆಸಿದ್ದು, ಉಳ್ಳವರ ಹಿತ ಕಾಯಲು ಮುಂದಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬಡವರಿಗೆ ಭೂಮಿ ನೀಡುವ ಕಾನೂನು ರೂಪಿಸಿತ್ತು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಧಿಕಾರದಲ್ಲಿದ್ದಾಗ ವಿಶೇಷ ಕಾಳಜಿ ವಹಿಸಿ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡಿಸಿದ್ದರು. ಬಿಜೆಪಿ ಸರ್ಕಾರ ಜನಪರ ಯೋಜನೆಗಳನ್ನು ಬದಿಗೊತ್ತಿ, ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಲು ಕ್ರಮ ಕೈಗೊಂಡಿದ್ದಾರೆ. ಹೈಕಮಾಂಡ್ ನಿರ್ದೇಶನದಂತೆ ಬೂತ್ ಮಟ್ಟದಲ್ಲಿ ಏಜೆಂಟರನ್ನು ನೇಮಕ ಮಾಡುವ ಮೂಲಕ ಮತದಾರರ ಪಟ್ಟಿಯಲ್ಲಿನ ಗೊಂದಲಗಳನ್ನು ನಿವಾರಿಸುವ ಗುರಿ ಹೊಂದಲಾಗಿದೆ. ಗ್ರಾಪಂ ಮಟ್ಟದಲ್ಲಿ ಅಧಿಕಾರಿಗಳ ಮೇಲೆ ಜನ ಅವಲಂಬಿಸುವಂತಾಗಿದೆ. ಈ ನಿಟ್ಟಿನಲ್ಲಿ ಗ್ರಾಪಂ ಚುನಾವಣೆ ಅನಿವಾರ್ಯವಾಗಿದೆ ಎಂದರು.
ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ. ಅಣ್ಣಪ್ಪ ಹಾಲಘಟ್ಟ, ಆನವಟ್ಟಿ ಬ್ಲಾಕ್ ಅಧ್ಯಕ್ಷ ರುದ್ರಗೌಡ ಸಿ. ಪಾಟೀಲ್, ಪಪಂ ಸದಸ್ಯರಾದ ಶ್ರೀರಂಜನಿ ಪ್ರವೀಣ್ ಕುಮಾರ್, ಡಿ.ಎಸ್. ಪ್ರಸನ್ನಕುಮಾರ್ ದೊಡ್ಮನೆ, ಆಫ್ರಿನ್ ಬಾನು, ಮುಖಂಡರಾದ ಚೌಟಿ ಚಂದ್ರಶೇಖರ ಪಾಟೀಲ, ಶ್ರೀಧರ್ ಹುಲ್ತಿಕೊಪ್ಪ, ಕೆ. ಮಂಜುನಾಥ್ ಹಳೇಸೊರಬ, ಬಾಸೂರು ಚಂದ್ರೇಗೌಡ, ಇ.ಎಚ್. ಮಂಜುನಾಥ್, ರಶೀದ್ ಸಾಬ್ ಹಿರೇಕೌಂಶಿ, ಶಿವಣ್ಣ ನಡಹಳ್ಳಿ, ಲಕ್ಷ್ಮಮ್ಮ ಇತರರಿದ್ದರು.