ಬೆಂಗಳೂರು: ಕಾಂಗ್ರೆಸ್‌ನ ಕೆಲವು ಮುಖಂಡರು ಹಾಗೂ ಲೋಕಸಭಾ ಚುನಾವಣಾ ಕಣದಲ್ಲಿರುವವರು ಭಾನುವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಹಾಲಿ ಸಂಸದ ಡಾ.ಎಂ.ವೀರಪ್ಪ ಮೊಯ್ಲಿಯವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಸಚಿವ ಶಿವಶಂಕರ ರೆಡ್ಡಿ ಅವರೊಂದಿಗೆ ಜೆ.ಪಿ.ನಗರದ ಮನೆಯಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಚುನಾವಣೆ ಲೆಕ್ಕಚಾರದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ನಂತರ ವೀರಪ್ಪ ಮೋಯ್ಲಿಯವರು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿದರು. ಇದಾದ ನಂತರ ಸಚಿವ ಜಮೀರ್ ಅಹಮ್ಮದ್ ಖಾನ್ ಕೂಡ ದೇವೇಗೌಡರನ್ನು ಭೇಟಿ ಮಾಡಿ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಬಿ ಫಾರಂ ಪಡೆದ ಅರ್ಷದ್: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರು ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ “ಬಿ’ ಫಾರಂ ಪಡೆದರು.
ಈ ವೇಳೆ ಮಾತನಾಡಿದ ಅವರು, ನಟ ಪ್ರಕಾಶ್ ರಾಜ್ ಪಕ್ಷೇತರರಾಗಿ ಸ್ಪರ್ಧಿಸಿರುವುದರಿಂದ ಹೆಚ್ಚು ಪರಿಣಾಮ ಬೀರುವುದಿಲ್ಲ. ಬೆಂಗಳೂರು ಕೇಂದ್ರ ಕ್ಷೇತ್ರಕ್ಕೆ ಬಿಜೆಪಿ ಸಂಸದ ಪಿ.ಸಿ.ಮೋಹನ್ ಅವರ ಕೊಡುಗೆ ಏನೂ ಇಲ್ಲ. ನಮ್ಮದು ಬಿಜೆಪಿ ವಿರುದ್ಧ ನೇರ ಸ್ಪರ್ಧೆ. ಕ್ಷೇತ್ರಕ್ಕೆ ಡೈನಾಮಿಕ್ ಸಂಸದ ಬೇಕು ಎಂದು ಹೇಳಿದರು.