ಬೆಂಗಳೂರು: ಮುಂಬರುವ ಉಪ ಚುನಾವಣೆಗಳಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದು ಬೇಡ ಎಂದು ಕಾಂಗ್ರೆಸ್ ಶಾಸಕರು ಪಕ್ಷದ ನಾಯಕರಿಗೆ ಮುಂದೆ ಹೇಳಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಹುತೇಕ ಶಾಸಕರು ಮೈತ್ರಿ ಮುಂದುವರೆಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದ್ದರಿಂದ ಕಾಂಗ್ರೆಸ್ ಕ್ಷೇತ್ರಗಳಲ್ಲೂ ಪ್ರತ್ಯೇಕ ಅಸ್ತಿತ್ವ ಇಲ್ಲದಂತಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ. ಸ್ವಂತ ಶಕ್ತಿಯಿಂದ ಹೋರಾಟ ಮಾಡಿ ಚುನಾವಣೆ ಗೆಲ್ಲಬಹುದು ಎಂದು ಶಾಸಕರು ನಾಯಕರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. 17 ಕ್ಷೇತ್ರಗಳಲ್ಲಿ ಈಗಿನಿಂದಲೇ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲು ಅನುಕೂಲವಾಗುತ್ತದೆ.
ಪ್ರತಿ ಕ್ಷೇತ್ರಕ್ಕೂ ಹಿರಿಯ ನಾಯಕರನ್ನು ಉಸ್ತುವಾರಿಯನ್ನಾಗಿ ಮಾಡಿ ಜವಾಬ್ದಾರಿ ವಹಿಸುವ ಬಗ್ಗೆ ಕೆಲವು ಶಾಸಕರು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಜೆಡಿಎಸ್ ಜತೆ ಮೈತ್ರಿ ಮುಂದುವರೆಸುವ ವಿಚಾರದಲ್ಲಿ ಹೈ ಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಪಕ್ಷದ ನಾಯಕರು ಶಾಸಕರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿಧಾನಸಭೆಯಲ್ಲಿ ಪ್ರತಿಪಕ್ಷವಾಗಿ ಒಗ್ಗಟ್ಟಿನಿಂದ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಬಗ್ಗೆಯೂ ಸಿದ್ದರಾಮಯ್ಯ ಶಾಸಕರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಜೆಡಿಎಸ್, ಬಿಜೆಪಿ ವಿರುದ್ಧದ ಹೋರಾಟದಲ್ಲಿ ಯಾವ ರೀತಿಯ ನಿಲುವು ತೆಗೆದುಕೊಳ್ಳಲಿದೆಯೋ ಗೊತ್ತಿಲ್ಲ. ಆದರೆ, ಕಾಂಗ್ರೆಸ್ ರಚನಾತ್ಮಕ ಪ್ರತಿಪಕ್ಷವಾಗಿ ಸದನದ ಒಳಗೆ, ಹೊರಗೆ ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಕೆಎಂಎಫ್ ವಿಚಾರದಲ್ಲಿ ಆಕ್ರೋಶ: ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕಾಗಿ ಎಲ್ಲದಕ್ಕೂ ಅವರ ಬಳಿ ಅಂಗಲಾಚುವಂತಾಗಿದೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಚ್.ಡಿ. ರೇವಣ್ಣ ವಿರುದ್ದ ಅಸಮಾಧಾನ ಹೊರ ಹಾಕಿದ್ದಾರೆಂದು ತಿಳಿದು ಬಂದಿದೆ. ಕೆಎಂಎಫ್ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ಗೆ ಬಿಟ್ಟು ಕೊಡಬೇಕೆಂದು ತೀರ್ಮಾನ ಆಗಿದ್ದರೂ, ರೇವಣ್ಣ ಅವರು ಅಗತ್ಯ ನಿರ್ದೇಶಕರ ಸಂಖ್ಯಾ ಬಲ ಇಲ್ಲದಿದ್ದರೂ, ಕಾಂಗ್ರೆಸ್‌ಗೆ ಅಧಿಕಾರ ಪಡೆಯಲು ಅಡ್ಡಗಾಲು ಹಾಕುತ್ತಿದ್ದಾರೆ. ಅವರೊಂದಿಗೆ ಮೈತ್ರಿ ಮುಂದುವರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಭೀಮಾನಾಯ್ಕ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.