ಬೆಂಗಳೂರು: ಅನರ್ಹ ಶಾಸಕರು ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಸಚಿವರನ್ನಾಗಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿರುವುದು ನೀತಿ ಸಂಹಿತೆ ಉಲ್ಲಂಘನೆ ಎಂದು ಆರೋಪಿಸಿ ಕಾಂಗ್ರೆಸ್ ನಿಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದೆ.
ದೂರು ಸಲ್ಲಿಸಿದ ನಂತರ ಮಾತನಾಡಿದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಅನರ್ಹ ಶಾಸಕರನ್ನು ಸಚಿವರನ್ನಾಗಿಸುವ ಹಾಗೂ ಶಂಕರ್ ಅವರನ್ನು ವಿಧಾನಪರಿಷತ್ ಸದಸ್ಯರಾಗಿಸುವ ಭರವಸೆ ನೀಡಿರುವುದು ಸ್ಪಷ್ಟ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಹೀಗಾಗಿ, ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ವಿರುದ್ಧ ದೂರು ನೀಡಲಾಗಿದೆ ಎಂದು ಹೇಳಿದರು.
ವಿಧಾನಸೌಧ ವ್ಯಾಪ್ತಿಯಲ್ಲಿ ಬರುವ ಶಿವಾಜಿನಗರ ಕ್ಷೇತ್ರಕ್ಕೆ ಸರವಣ ಅವರನ್ನು ಆಯ್ಕೆ ಮಾಡಿದ್ದೇವೆ. ಅವರ ತಮಿಳು ಭಾಷಿಕರಾಗಿದ್ದರಿಂದ ಅವರಿಗೆ ಟಿಕೆಟ್ ನೀಡಿದ್ದೇವೆ ಎಂದು ಹೇಳಿದ್ದಾರೆ. ನಿಮ್ಮದೇ ಭಾಷಿಕನಿಗೆ ಟಿಕೆಟ್ ಕೊಟ್ಟಿದ್ದೇವೆ, ಅವರನ್ನೂ ಗೆಲ್ಲಿಸಿಕೊಡಿ ಎಂದು ತಮಿಳು ಭಾಷಿಕರ ಓಲೈಕೆ ಮಾಡಲಾಗಿದೆ. ಇದೂ ಸಹ ನೀತಿ ಸಂಹಿತೆ ಉಲ್ಲಂಘಟನೆ. ಹೀಗಾಗಿ, ಇವರೆಲ್ಲರ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
17 ಆನರ್ಹ ಶಾಸಕರು ಬಿಜೆಪಿ ಸೇರಿದ್ದು ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ಇವರು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಇವೆರೆಲ್ಲರ ಕುಮ್ಮಕ್ಕಿನಿಂದಲೇ ಯಡಿಯೂರಪ್ಪ ಅವರು ಸಚಿವರನ್ನಾಗಿಸುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಸೀರೆ
ಹುಣಸೂರು ಬಳಿ ಸಿಕ್ಕ 30 ಸಾವಿರ ಸೀರೆಗಳ ಬಗ್ಗೆಯೂ ದೂರು ನೀಡಿದ್ದೇವೆ. ಸೀರೆಗಳ ಮೇಲೆ ಬಿಜೆಪಿ ನಾಯಕ ಯೋಗೇಶ್ವರ್ ಭಾವಚಿತ್ರ ಇದೆ. ಯೋಗೇಶ್ವರ್ ಸೀರೆ ಹಂಚಿಕೆ ಮಾಡಿದ್ದಾರೆ. ಈ ನಗ್ಗೆಯೂ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು ಕೂಡಲೇ ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.