ನವದೆಹಲಿ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ರಾಷ್ಟ್ರಪತಿ ಭವನಕ್ಕೆ ತೆರಳುವ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದು, ಈ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಕೆಲವು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಘಟನೆ ಗುರುವಾರ(ಡಿಸೆಂಬರ್ 24, 2020) ನಡೆದಿದೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಷ್ಟ್ರಪತಿ ಭವನಕ್ಕೆ ತೆರಳಲು ಪ್ರತಿಭಟನಾ ಮೆರವಣಿಗೆ ಮೂಲಕ ಸಾಗುತ್ತಿದ್ದ ವೇಳೆ ಪೊಲೀಸರು ಅವರನ್ನು ತಡೆದು, ಮೂರು ಕಾಯ್ದೆಗಳನ್ನು ಹಿಂಪಡೆಯುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಸಲ್ಲಿಸಲು ಕೆಲವು ಮಂದಿಗೆ ಮಾತ್ರ ರಾಷ್ಟ್ರಪತಿ ಭವನಕ್ಕೆ ತೆರಳಲು ಅನುವು ಮಾಡಿಕೊಟ್ಟಿರುವುದಾಗಿ ವರದಿ ತಿಳಿಸಿದೆ.
ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ಎರಡು ಕೋಟಿ ರೈತರ ಸಹಿ ಸಂಗ್ರಹಿಸಿ ಮನವಿ ನೀಡಿರುವುದಾಗಿ ಕಾಂಗ್ರೆಸ್ ಪಕ್ಷ ತಿಳಿಸಿದೆ.
ಈ ಮೂರು ಕೃಷಿ ಕಾಯ್ದೆಗಳು ರದ್ದಾಗದೆ ರೈತರು ಪ್ರತಿಭಟನಾ ಸ್ಥಳದಿಂದ ಕದಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಲು ಬಯಸುತ್ತೇನೆ. ಕೇಂದ್ರ ಸರ್ಕಾರ ಕೂಡಲೇ ಜಂಟಿ ಅಧಿವೇಶನ ಕರೆದು ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲಿ. ವಿಪಕ್ಷಗಳು ರೈತರು ಮತ್ತು ಕಾರ್ಮಿಕರ ನಿಲುವಿಗೆ ಬೆಂಬಲ ನೀಡುತ್ತದೆ ಎಂದು ರಾಹುಲ್ ಗಾಂಧಿ ರಾಷ್ಟ್ರಪತಿ ಭೇಟಿ ನಂತರ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲದಂತಾಗಿದೆ. ಯಾರು ಪ್ರಧಾನಿ ಮೋದಿ ವಿರುದ್ಧ ಎದ್ದು ನಿಲ್ಲುತ್ತಾರೋ ಅಂತಹವರಿಗೆ ಉಗ್ರರು ಎಂಬ ಪಟ್ಟ ಕಟ್ಟಲಾಗುತ್ತಿದೆ ಎಂದು ಆರೋಪಿಸಿದರು.