ಮಡಿಕೇರಿ: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡು ವಾಮಮಾರ್ಗದ ಮೂಲಕ ರಾಜಕಾರಣ ಮಾಡುತ್ತಿವೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜನರಲ್ ತಿವ¾¾ಯ್ಯ ವೃತ್ತದಲ್ಲಿ ರಾಜ್ಯಪಾಲರು, ಕೇಂದ್ರ ಸರಕಾರ, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆ ಕೂಗಿದರು.
ಬಹುಮತ ಪಡೆದಿರುವ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮೊದಲಿನಿಂದಲೂ ಹವಣಿಸುತ್ತಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ಕ್ರಮ ಅಸಾಂವಿಧಾನಿಕ ಮತ್ತು ಇದು ಬಿಜೆಪಿಯ ಷಡ್ಯಂತ್ರದ ಒಂದು ಭಾಗ. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅವಕಾಶ ನೀಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಪರವಾಗಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಪ್ರಮುಖ 7 ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಿದರು.
ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಸಹಿತ ಪ್ರಮುಖರು ಉಪಸ್ಥಿತರಿದ್ದರು.