ಬೆಂಗಳೂರು: ಬಳ್ಳಾರಿಯ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ಆನಂದ್ ಸಿಂಗ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ವಿಜಯನಗರ ಕ್ಷೇತ್ರದ ಶಾಸಕರಾಗಿರುವ ಆನಂದ್ ಸಿಂಗ್ ಈ ಹಿಂದೆ ಕೂಡಾ ಅತೃಪ್ತ ಶಾಸಕರ ಜೊತೆ ಗುರುತಿಸಿಕೊಂಡಿದ್ದರು. ಆನಂದ್ ಸಿಂಗ್ ಇನ್ನೂ ಹಲವು ಕೈ ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆ ಇದೆ. ಹೀಗಾಗಿ ಆನಂದ್ ಸಿಂಗ್ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ಸೋಮವಾರ ಬೆಳಗ್ಗೆ ತೆರಳಿ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚೆಗಷ್ಟೇ ಜಿಂದಾಲ್ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಮೈತ್ರಿ ಸರಕಾರದ ವಿರುದ್ಧವೇ ವಾಗ್ದಾಳಿ ನಡೆಸಿದ್ದರು.
ಏತನ್ಮಧ್ಯೆ ಶಾಸಕ ಆನಂದ್ ಸಿಂಗ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ, ತನಗೆ ಯಾರೂ ಬಂದು ರಾಜೀನಾಮೆ ಕೊಟ್ಟಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ.