ನವ ದೆಹಲಿ: ಪಟಿಯಾಲದ ಕಾಂಗ್ರೆಸ್ ಸಂಸದೆ ಪ್ರಣೀತ್ ಕೌರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಶುಕ್ರವಾರ (ಫೆ 3) ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಲೋಕಸಭೆಯ ಕಾಂಗ್ರೆಸ್ ಸಂಸದೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದಾರೆ ಮತ್ತು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ ಆದ್ದರಿಂದ ಅವರ ವಿರುದ್ಧ ಈ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಿಸಿಸಿ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರಿಂದ ದೂರು ಸ್ವೀಕರಿಸಿದ್ದರು. ಅಲ್ಲದೆ, ಅವರನ್ನು ಪಕ್ಷದಿಂದ ಏಕೆ ತೆಗೆದುಹಾಕಬಾರದು ಎಂದು ವಿವರಿಸಲು ಪಕ್ಷವು ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು.
ಪ್ರಣೀತ್ ಕೌರ್ ಅವರು 2009 ರಿಂದ 2014 ರವರೆಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಪತಿ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಗೆ ಸೇರುವ ಮೊದಲು ಕಾಂಗ್ರೆಸ್ ಪಕ್ಷದ ಭಾಗವಾಗಿದ್ದರು.