ಬೆಂಗಳೂರು: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದ ವಿರೋಧಿಸಿ ಕಾಂಗ್ರೆಸ್ ಪಕ್ಷವು ರಾಷ್ಟ್ರವ್ಯಾಪಿ ಹೋರಾಟ ಹಮ್ಮಿಕೊಳ್ಳುತ್ತಿದ್ದು, ಕರ್ನಾಟಕದಲ್ಲೂ ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಸೂಚನೆ ನೀಡಿದೆ.
ನ.5 ರಿಂದ 15 ರವರೆಗೆ ರಾಷ್ಟ್ರವ್ಯಾಪಿ ಹೋರಾಟ ನಡೆಯಲಿದ್ದು ಕರ್ನಾಟಕದಲ್ಲೂ ಹೋರಾಟ ರೂಪಿಸಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆವರಿಗೆ ನಿರ್ದೇಶನ ನೀಡಲಾಗಿದೆ.
ಹೋರಾಟದ ರೂಪು-ರೇಷೆ, ಸ್ವರೂಪ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ದೇಶದ ಎಲ್ಲ ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರ ಸಭೆ ನಡೆದು ತೀರ್ಮಾನವಾಗಲಿದೆ ಎಂದು ಹೇಳಲಾಗಿದೆ. ಜತೆಗೆ ಪ್ರದೇಶ ಕಾಂಗ್ರೆಸ್ ಸಮಿತಿಗಳು ನಡೆಸುವ ಹೋರಾಟದ ಕುರಿತು ಹೈಕಮಾಂಡ್‌ಗೆ ಮಾಹಿತಿ ನೀಡಲು ವೀಕ್ಷಕರನ್ನು ಸಹ ನೇಮಕ ಮಾಡಲಾಗುವುದು ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸಿ ನ.4 ರಂದು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಲು ನಿರ್ಧರಿಸಿದ್ದು ಇದಕ್ಕೆ ನಮ್ಮ ವಿರೋಧವಿದೆ ಎಂದು ಹೇಳಿದ್ದರು.
ಹಾಲು ಹಾಗೂ ಹಾಲಿನ ಉತ್ಪನ್ನ, ಸಾಂಬಾರು ಪದಾರ್ಥ , ಔಷಧ ಸೇರಿದಂತೆ 192 ವಸ್ತುಗಳು ಆಮದು ಸುಂಕ ಇಲ್ಲದ ಇಲ್ಲದೆ ಅಥವಾ ಕಡಿಮೆ ಆಮದು ಸುಂಕ ಪಾವತಿಸಿ ಆಮದು ಮಾಡಿಕೊಳ್ಳುವುದು ಒಪ್ಪಂದದ ಉದ್ದೇಶ. ಆದರೆ, ಇದರಿಂದ ದೇಶದ ರೈತಾಪಿ ಸಮುದಾಯ ಸಂಕಷ್ಟಕ್ಕೆ ಸಿಲುಕಲಿದೆ. ಗ್ರಾಮೀಣ ಭಾಗದ ಆರ್ಥಿಕತೆ ಕುಸಿಯುತ್ತದೆ. ವಿದೇಶದ ಉತ್ಪನ್ನಗಳು ಕಡಿಮೆ ಬೆಲೆಗೆ ಸಿಕ್ಕರೆ ನಮ್ಮ ರೈತರ ಉತ್ಪನ್ನಗಳಿಗೆ ಬೆಲೆ ಇಲ್ಲದಂತಾಗುತ್ತದೆ. ಹೀಗಾಗಿ, ನಾವು ಇದರ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದರು.