Advertisement
ಬೆಂಗಳೂರು ಹೊರ ವಲಯದ ಖಾಸಗಿ ಹೊಟೇಲ್ ನಲ್ಲಿ ನಡೆಯುತ್ತಿರುವ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ತೆಗೆದುಕೊಂಡಾಗ, ‘ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು’ ಎಂದು ಹೇಳಿದ್ದೆ. ಈಗ ಅದು ಸಾಕಾರಗೊಳ್ಳುತ್ತಿದೆ ಎಂದು ಅಭಿಪ್ರಾಯಪಟ್ಟರು.
Related Articles
Advertisement
ನಿಮ್ಮ ಸಲಹೆ ರಾಜ್ಯ ಹಾಗೂ ದೇಶದ ಭವಿಷ್ಯ, ಪಕ್ಷದ ಬಲವರ್ಧನೆ, 2023 ಹಾಗೂ 2024 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಇರಲಿ. ಉದಯಪುರ ಸಭೆ ನಿರ್ಣಯಗಳನ್ನು ನಿಮಗೆ ನೀಡಲಾಗುವುದು. ಎಐಸಿಸಿ ಸೂಚನೆ ಅನ್ವಯ ಪಕ್ಷದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದಿಷ್ಟ ಜವಾಬ್ದಾರಿ ನೀಡಲಾಗಿದ್ದು, ನೀವು ತಿಂಗಳಲ್ಲಿ 15-20 ದಿನ ಪಕ್ಷಕ್ಕೆ ಸಮಯ ನೀಡಬೇಕು ಎಂದು ಕರೆ ನೀಡಿದರು.
ಪಂಚಾಯ್ತಿಗಳಲ್ಲಿ ಸಭೆ ನಡೆಸಿ, ಅಲ್ಲಿನ ಸಮಸ್ಯೆ ಗುರುತಿಸಿ, ಬಗೆಹರಿಸಬೇಕು. ಪಕ್ಷ ಹಾಗೂ ಪಕ್ಷದ ಸಿದ್ಧಾಂತದ ಪರವಾಗಿರುವ ಸ್ಥಳೀಯ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕಾರ್ಯಕ್ರಮ ರೂಪಿಸಬೇಕು. ರಾಜ್ಯದಲ್ಲಿ 78 ಲಕ್ಷ ಸದಸ್ಯರನ್ನು ನೋಂದಣಿ ಮಾಡಲಾಗಿದ್ದು, ಅದರಲ್ಲಿ ಶೇ.42 ರಷ್ಟು ಮಂದಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರು, ಶೇ.42 ರಷ್ಟು ಮಂದಿ ಮಹಿಳೆಯರು. ಸದಸ್ಯತ್ವ ನೋಂದಣಿ ಮುಂದುವರಿಯಲಿದ್ದು, ಬೂತ್ ಮಟ್ಟದ ಸಮಿತಿ ಸೇರಿ ಎಲ್ಲ ಸಮಿತಿಗಳನ್ನು ರಚಿಸಲು ಕಾಲಮಿತಿ ನಿಗದಿ ಮಾಡಲಾಗಿದೆ ಎಂದರು.
ಪ್ರತಿ ಜಿಲ್ಲೆಯಲ್ಲಿ ಆಗಸ್ಟ್ 9 ರಿಂದ ಆಗಸ್ಟ್ 15 ರ ವರೆಗೆ ಜಿಲ್ಲಾ ಮಟ್ಟದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲು ರಾಷ್ಟ್ರ ನಾಯಕರು ಸೂಚಿಸಿದ್ದಾರೆ. ಯುವಕರು, ವಿದ್ಯಾರ್ಥಿಗಳು, ಎಲ್ಲಾ ವರ್ಗದವರನ್ನು ಸೇರಿಸಿಕೊಂಡು ಸರಕಾರದ ವೈಫಲ್ಯಗಳ ವಿರುದ್ಧ ದೊಡ್ಡ ಹೋರಾಟ ಮಾಡಬೇಕಾಗಿದೆ. ನಿಮ್ಮ ಕ್ಷೇತ್ರ, ಜಿಲ್ಲೆ ಹಾಗೂ ರಾಜ್ಯಕ್ಕೆ ಪ್ರತ್ಯೇಕ ಪ್ರಣಾಳಿಕೆ ಮಾಡಬೇಕು. ಕರಾವಳಿ, ಮಲೆನಾಡು, ಬೆಂಗಳೂರು, ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲಾ ವಲಯಕ್ಕೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಬೇಕು. ಎಲ್ಲಾ ವರ್ಗದ ಜನರ ಸೇವೆಗೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ಉತ್ತಮ ಆಡಳಿತ ನೀಡುವ ಸರ್ಕಾರ ರಚಿಸಬೇಕು ಎಂದರು.