Advertisement

ಕೈ ಪಾದಯಾತ್ರೆ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

08:21 PM Jan 11, 2022 | Team Udayavani |

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ “ನಮ್ಮ ನೀರು ನಮ್ಮ ಹಕ್ಕು’ ಹೆಸರಲ್ಲಿ ಕಾಂಗ್ರೆಸ್‌ ಪಕ್ಷ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

Advertisement

ಪಾದಯಾತ್ರೆ ತಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಬೆಂಗಳೂರಿನ ನಿವಾಸಿ ಎ.ವಿ. ನಾಗೇಂದ್ರಪ್ರಸಾದ್‌ ಎಂಬುವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಮನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಮುಖ್ಯ ಆಯುಕ್ತರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಯಾವುದೇ ರಾಜಕೀಯ ಪಕ್ಷಗಳಿಗೆ ಮೆರವಣಿಗೆ, ಧರಣಿ ಹಾಗೂ ಪ್ರತಿಭಟನೆ ನಡೆಸಲು ಅನುಮತಿ ನೀಡಬಾರದು ಹಾಗೂ ಮೇಕೆದಾಟು ಯೋಜನೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ಮುಂದುವರಿಸದಂತೆ ಕಾಂಗ್ರೆಸ್‌ ಪಕ್ಷವನ್ನು ನಿರ್ಬಂಧಿಸುವಂತೆ ಸರ್ಕಾರ, ರಾಮನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಮುಖ್ಯ ಆಯುಕ್ತರು ಸೇರಿದಂತೆ ಸಂಬಂಧಪಟ್ಟ ಇತರ ಪ್ರಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕಾಗಿ ಸರ್ಕಾರ ವಿಧಿಸಿರುವ ನಿರ್ಬಂಧಗಳ ನಡುವೆಯೂ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್‌ ಪಕ್ಷ ಜ.9ರಿಂದ 10 ದಿನಗಳ ಪಾದಯಾತ್ರೆ ಆರಂಭಿಸಿದೆ. ಇದರ ನೇತೃತ್ವವನ್ನು ಕೆಪಿಸಿಸಿ ಅಧ್ಯಕ್ಷ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಹಿಸಿದ್ದಾರೆ. ಈ ಪಾದಯಾತ್ರೆಯಲ್ಲಿ ಕಾರ್ಯಕರ್ತರು, ಮುಖಂಡರು, ಸಾಂಸ್ಕೃತಿಕ ತಂಡಗಳು ಸೇರಿ ಸಾವಿರಾರು ಮಂದಿ ಪಾಲ್ಗೊಳ್ಳುತ್ತಿದ್ದಾರೆ. ಇದರಿಂದ, ಕೋವಿಡ್‌ ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ:ದಾವಣಗೆರೆ : ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 46 ಮಂದಿಯಲ್ಲಿ ಸೋಂಕು ದೃಢ

Advertisement

ಕೋವಿಡ್‌ ರೂಪಾಂತರಿ ಒಮ್ರಿಕಾನ್‌ ವೈರಸ್‌ ಸಮುದಾಯಕ್ಕೆ ಹಬ್ಬುವ ಅಪಾಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಈಗಾಗಲೇ ಎಚ್ಚರಿಕೆ ನೀಡಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರು ಹಾಗೂ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಸಾರ್ವಜನಿಕ ಚಟುವಟಿಕೆ ನಿರ್ಬಂಧಿಸಲು ಜ.19ರವರೆಗೆ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂಗಳನ್ನು ಜಾರಿಗೆ ತರಲಾಗಿದೆ. ಜತೆಗೆ, ಎಲ್ಲ ರೀತಿಯ ಮೆರವಣಿಗೆ, ಧರಣಿ, ಪ್ರತಿಭಟನೆಗಳನ್ನೂ ನಿರ್ಬಂಧಿಸಲಾಗಿದೆ. ಆದರೆ, ಈ ನಿಯಮಗಳನ್ನೂ ಉಲ್ಲಂಘಿಸಿ ಕಾಂಗ್ರೆಸ್‌ ಪಾದಯಾತ್ರೆ ನಡೆಸುತ್ತಿದೆ. ಹೀಗಿದ್ದರೂ ಸರ್ಕಾರ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next