ಗುಂಡ್ಲುಪೇಟೆ: ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಬಲ ಪಡಿಸುವ ಉದ್ದೇಶದಿಂದ ಈಗಿನಿಂದಲೇ ಯೋಜನೆ ರೂಪಿಸಿ ಕೆಲಸ ಮಾಡಲು ಆರಂಭಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶಪ್ರಸಾದ್ ಹೇಳಿದರು.
ತಾಲೂಕಿನ ಭೀಮನಬೀಡು ಗ್ರಾಮದ ಬಾಣಂತಿ ಮಾರಮ್ಮ ದೇವಸ್ಥಾನದಲ್ಲಿ ನಡೆದ ಗ್ರಾಪಂ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಅಸಮಾಧಾನ ಬದಿಗೊತ್ತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಇರುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಬಲ ಪಡಿಸಬೇಕೆಂದು ಮನವಿ ಮಾಡಿದರು.
ತಾಲೂಕು ಸೇರಿದಂತೆ ಕ್ಷೇತ್ರದ ಹಲವು ಹಳ್ಳಿಗಳಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಎಲ್ಲಾ ಸಮುದಾಯಗಳನ್ನು ಬದಿಗೊತ್ತಿ ಕೇವಲ ಒಂದು ಸಮುದಾಯವನ್ನು ಮಾತ್ರ ಓಲೈಕೆ ಮಾಡಲಾಗುತ್ತಿದೆ. ಬಿಜೆಪಿ ಉಪ್ಪಾರ ಸಮುದಾಯಕ್ಕೆ ಯಾವುದೇ ಸ್ಥಾನಮಾನ ನೀಡಿಲ್ಲ. ಇನ್ನಿತರ ಹಲವು ಹಿಂದುಳಿದ ಜನಾಂಗದವರನ್ನು ನಿರ್ಲಕ್ಷಿಸಿ ಪ್ರಮುಖ ಹುದ್ದೆಗಳನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸಲಾಗಿದೆ. ಲಿಂಗಾಯತ ಸಮುದಾಯ ಭನವಕ್ಕೆ 2 ಕೋಟಿ 50 ಲಕ್ಷ ಅನುದಾನ ನೀಡಲಾಗಿದೆ ಎಂದು ಸ್ಥಳೀಯ ಶಾಸಕರು ಹೇಳಿಕೆ ನೀಡುತ್ತಿದ್ದಾರೆ. ಹೀಗಿದ್ದಲ್ಲಿ ಉಳಿದ ಸಮುದಾಯಗಳಿಗೆ ಏಕೆ ಅನುದಾನ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.
ಮುಂಬರುವ ವಿಧಾನ ಸಭಾ ಚುನಾವಣೆ ಬಹಳ ಮಹತ್ವದ್ದಾಗಿದೆ. ಈಗಗಲೇ ಬಿಜೆಪಿ ವಿರೋಧಿ ಅಲೆ ಎದ್ದಿದ್ದು, ರಾಜ್ಯ ಹಾಗೂ ಕ್ಷೇತ್ರದಲ್ಲೂ ಕಾಂಗ್ರೆಸ್ ಬಲಿಷ್ಠವಾಗಿದೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯಯ ಇಬ್ಬರು ಉತ್ತಮ ನಾಯಕರಾಗಿ ದ್ದಾರೆ. ಈ ಹಿಂದೆ ಎಚ್.ಎಸ್.ಮಹದೇವಪ್ರಸಾದ್ ಅವರಿಗೆ ಸಹಕಾರ ನೀಡಿದಂತೆ ಮುಂದೆಯೂ ಸಹ ಕೊಡಬೇಕು. ಈ ಮೂಲಕ ಸದಾ ನಿಮ್ಮ ಜೊತೆಯಿದ್ದು, ಕಷ್ಟ ಸುಃಖಗಳಿಗೆ ಸ್ಪಂದಿಸಲಾಗುವುದು ಎಂದರು.
ಗ್ರಾಪಂ ಅಧ್ಯಕ್ಷ ಬಿ.ಜಿ.ಶಿವಕುಮಾರ್, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಹೆಚ್.ಎಸ್.ನಂಜಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರಾಜು, ಗ್ರಾಪಂ ಸದಸ್ಯ ಜಿ.ಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು