ಬೆಂಗಳೂರು: ಮೂರು ಮಹಾನಗರ ಪಾಲಿಕೆಗಳು ಸೇರಿದಂತೆ 38 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟ ಜಿಲ್ಲಾ ನಾಯಕರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತ್ಯೇಕ ಸಭೆ ನಡೆಸಿ, ಸೂಚನೆ ನೀಡಿದ್ದಾರೆ.
ಬುಧವಾರ ಮಂಗಳೂರು, ಹುಬ್ಬಳ್ಳಿ-ಧಾರವಾಡ ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಗಳ ಚುನಾವಣೆ ಸಿದ್ಧತೆ ಕುರಿತಂತೆ ಮೂರು ಮಹಾನಗರ ವ್ಯಾಪ್ತಿಯ ಜಿಲ್ಲಾ ಮುಖಂಡರುಗಳೊಂದಿಗೆ ದಿನೇಶ್ ಗುಂಡೂರಾವ್ ಪ್ರತ್ಯೇಕವಾಗಿ ಸಭೆ ನಡೆಸಿದರು.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿರುವುದರಿಂದ ಪಕ್ಷದ ಸ್ಥಳೀಯ ಮುಖಂಡರು ಧೃತಿಗೆಡುವ ಅಗತ್ಯವಿಲ್ಲ. ನಂತರ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮೊದಲ ಸ್ಥಾನದಲ್ಲಿದೆ.
ಮಂಗಳೂರು ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಗಳಲ್ಲಿ ಕಾಂಗ್ರೆಸ್ ಅಧಿಕಾರ ನಡೆಸಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ನಡೆಸಿದೆ. ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಗಮನಿಸಿದರೆ ಮೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸೂಕ್ತ ವಾತಾವರಣ ಇದೆ.
ಹೀಗಾಗಿ, ಮಹಾನಗರ ಪಾಲಿಕೆ ಚುನಾವಣೆಗಳಿಗೂ ಈಗಿನಿಂದಲೇ ಚುನಾವಣೆಗೆ ಸಿದ್ಧತೆ ಆರಂಭಿಸಿದರೆ, ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದ್ದಾರೆ. ಅಲ್ಲದೇ, ಸ್ಥಳೀಯವಾಗಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಆದಷ್ಟು ಬೇಗ ಮಾಡುವುದರಿಂದ ಚುನಾವಣಾ ಪ್ರಚಾರ ಕೈಗೊಂಡು ಜನರನ್ನು ತಲುಪಲು ಅನುಕೂಲವಾಗಲಿದೆ.
ಸ್ಥಳೀಯ ಕಾರ್ಪೊರೇಟರ್‌ಗಳು ಹಾಗೂ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಅಭ್ಯರ್ಥಿಗಳೊಂದಿಗೆ ರಾಜ್ಯ ಮುಖಂಡರು ಸಭೆ ನಡೆಸಿ, ಸೂಕ್ತ ಸಲಹೆಗಳನ್ನು ನೀಡಬೇಕು ಎಂದು ಜಿಲ್ಲಾ ಮುಖಂಡರುಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಮೂರು ಮಹಾನಗರ ಪಾಲಿಕೆಗಳ ಅವಧಿ ಮುಕ್ತಾಯವಾಗಿದ್ದು, ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಬಳ್ಳಾರಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಕರಣ ಹೈ-ಕೋರ್ಟ್‌ನಲ್ಲಿದ್ದು, ಜೂ. 16ಕ್ಕೆ ವಿಚಾರಣೆಗೆ ಬರಲಿದೆ. ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.