ಅಹಮದಾಬಾದ್: ಗುಜರಾತ್ ನಲ್ಲಿ ಅಧಿಕಾರಕ್ಕೆ ಬಂದರೆ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ಅನ್ನು ಸರ್ದಾರ್ ಪಟೇಲ್ ಸ್ಟೇಡಿಯಂ ಎಂದು ಮರುನಾಮಕರಣ ಮಾಡುವುದಾಗಿ ಕಾಂಗ್ರೆಸ್ ಇಂದು ಭರವಸೆ ನೀಡಿದೆ.
ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪಕ್ಷವು ಸರ್ಕಾರ ರಚಿಸಿದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿಯೇ ಚುನಾವಣಾ ಪ್ರಣಾಳಿಕೆಯನ್ನು ಅಧಿಕೃತ ದಾಖಲೆಯಾಗಿ ಕಾಂಗ್ರೆಸ್ ಸ್ವೀಕರಿಸುತ್ತದೆ ಎಂದು ಹೇಳಿದರು.
ಎರಡು ಹಂತದಲ್ಲಿ ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 1 ಮತ್ತು 5ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8ರಂದು ಮತ ಎಣಿಕೆ ನಡೆಯಲಿದೆ.
ಎಲ್ಲಾ ಗುಜರಾತಿಗಳಿಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಭರವಸೆ ನೀಡಲಾಗಿದೆ. ಅಲ್ಲದೆ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇಕಡಾ 50 ರಷ್ಟು ಮೀಸಲಾತಿಯನ್ನು ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ರಾಜ್ಯದ ಪ್ರತಿಯೊಬ್ಬ ಮಹಿಳೆ, ವಿಧವೆ ಮತ್ತು ವೃದ್ಧ ಮಹಿಳೆಗೆ ಮಾಸಿಕ 2,000 ರೂ ಅನುದಾನವನ್ನು ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ.
ಸರ್ಕಾರದಿಂದ 3,000 ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲಾಗುವುದು. ರಾಜ್ಯದ ಹೆಣ್ಣುಮಕ್ಕಳಿಗೆ ಅವರ ಸ್ನಾತಕೋತ್ತರ ಪದವಿಯವರೆಗೆ ಉಚಿತ ಶಿಕ್ಷಣವನ್ನು ನೀಡಲಾಗುವುದು ಎಂದು ಪಕ್ಷವು ಹೇಳಿದೆ.